Mysore
18
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಪಿಎಸ್ಐ ನೇಮಕಾತಿ ಹಗರಣ| ಮರು ಪರೀಕ್ಷೆ ಕುರಿತು ಮಾಹಿತಿ ನೀಡಲು ಸರ್ಕಾರಕ್ಕೆ ಜುಲೈ 5ರವರೆಗೆ ಕಾಲಾವಕಾಶ: ಹೈಕೋರ್ಟ್‌

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆ ಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸುವ ಸಾಧ್ಯತೆಯ ಬಗ್ಗೆ ಜುಲೈ 5ರೊಳಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.

ಜೂನ್‌ 15ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯವು 545 ಪಿಎಸ್‌ಐ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಲ್ಲಿ ಆರೋಪ ಪಟ್ಟಿಯಲ್ಲಿ ಹೆಸರಿರುವವರನ್ನು ಹೊರತುಪಡಿಸಿ ಉಳಿದವರಿಗೆ ಮಾತ್ರ ಪರೀಕ್ಷೆ ನಡೆಸಬಹುದೇ, ಆ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಅವರನ್ನು ಹುದ್ದೆಗೆ ಪರಿಗಣಿಸಲು ಸಾಧ್ಯವೇ ಎಂಬ ಬಗ್ಗೆ ಸರ್ಕಾರದಿಂದ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸುವಂತೆ ಅಡ್ವೊಕೇಟ್ ಜನರಲ್ (ಎಜಿ) ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿತ್ತು.

ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ ಎಜಿ ಶಶಿಕಿರಣ್ ಶೆಟ್ಟಿ ಅವರು ಹೈಕೋರ್ಟ್ ಸೂಚನೆಯಂತೆ ಆರೋಪ ಪಟ್ಟಿಯಲ್ಲಿ ಹೆಸರಿರದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸುವ ಸಾಧ್ಯತೆ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಕುರಿತ ನಿರ್ಧಾರ ತಿಳಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಅದನ್ನು ಪರಿಗಣಿಸಿದ ಪೀಠವು ಸರ್ಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಜುಲೈ 5ಕ್ಕೆ ಮುಂದೂಡಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!