ಪಂಜಾಬ್‌ ಮುಖ್ಯಮಂತ್ರಿ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ

ಹೊಸದಿಲ್ಲಿ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಂತೆ, ಪಕ್ಷದ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾಯಿಸುವಂತೆ 40 ಕಾಂಗ್ರೆಸ್ ಶಾಸಕರು ಒತ್ತಾಯಿಸಿದ ನಂತರ ಹೈಕಮಾಂಡ್ ನಿರ್ಧಾರ ಕೈಗೊಂಡು ಅಧಿಕಾರದಿಂದ ಕೆಳಗಿಳಿಯುವಂತೆ ಸೂಚಿಸಿತ್ತು.

ಶನಿವಾರ ಸಂಜೆ ನಡೆದ ಪಕ್ಷದ ಶಾಸಕರ ಸಭೆಯ ನಂತರ ಹೊಸ ನಾಯಕನನ್ನು ಆಯ್ಕೆ ಮಾಡಲಾಯಿತು. ಪಂಜಾಬ್ ಎಐಸಿಸಿ ಉಸ್ತುವಾರಿ ಹರೀಶ್ ರಾವತ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕೆನ್ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು.

ಪಂಜಾಬ್ ನ 40 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದರು. ಅಮರೀಂದರ್ ಸಿಂಗ್ ಅವರು ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿರುವುದರಿಂದ ಅವರು ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಲಾಗಿತ್ತು.

ಶನಿವಾರ ಬೆಳಿಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ್ದ ಕ್ಯಾ.ಅಮರೀಂದರ್ ಸಿಂಗ್ ಅವರು, ಇತ್ತೀಚೆಗೆ ಪಕ್ಷದಲ್ಲಿ ಸಾಕಷ್ಟು ಅವಮಾನ ಹಾಗೂ ಮಾನಸಿಕವಾಗಿ ನೋವು ಅನುಭವಿಸಿದ್ದೇನೆ. ಇದು ನನಗೆ ಮೂರನೇ ಬಾರಿ ಆಗುತ್ತಿರುವ ಅನುಭವ ಎಂದು ಹೆಳಿದರೆಂದು ಮೂಲಗಳು ತಿಳಿಸಿವೆ. ಒಂದು ಹಂತದಲ್ಲಿ ಪಕ್ಷಕ್ಕೇ ರಾಜೀನಾಮೆ ನೀಡುವುದಾಗಿ ಹೇಳಿದರೆಂದು ಗೊತ್ತಾಗಿದೆ.

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ, ಕಾಂಗ್ರೆಸ್ 2017ರಲ್ಲಿ ಅಮರೀಂದರ್ ಸಿಂಗ್ ನೇತೃತ್ವದಲ್ಲಿ 77 ಸ್ಥಾನಗಳನ್ನು ಗೆದ್ದಿತ್ತು. ಇನ್ಜು, 4 ತಿಂಗಳಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಭವಿಷ್ಯದ ಆಯ್ಕೆಗಳು ಮುಕ್ತವಾಗಿವೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಿಷ್ಯದ ಆಯ್ಕೆಗಳು ಮುಕ್ತವಾಗಿವೆ ಎಂದು ಹೇಳಿದರು.

× Chat with us