Mysore
18
few clouds

Social Media

ಬುಧವಾರ, 22 ಜನವರಿ 2025
Light
Dark

ಅಧಿಕೃತ ಸರ್ಕಾರಿ ಬಂಗಲೆಯನ್ನು ಮರಳಿ ಪಡೆದ ರಾಹುಲ್ ಗಾಂಧಿ

ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ದೆಹಲಿಯ ಅಧಿಕೃತ ಸರ್ಕಾರಿ ಬಂಗಲೆಯನ್ನು ಮರು ಹಂಚಿಕೆ ಮಾಡಲಾಗಿದೆ. ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಅದಾದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ದೆಹಲಿಯ ಲುಟೆನ್ಸ್‌ನಲ್ಲಿರುವ ನಂ.12, ತುಘಲಕ್ ಲೇನ್‌ನಲ್ಲಿನ ಸರ್ಕಾರಿ ಬಂಗಲೆಯನ್ನು ಲೋಕಸಭೆಯ ಸದನ ಸಮಿತಿಯು ರಾಹುಲ್ ಗಾಂಧಿ ಅವರಿಗೆ ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಅವರು ಈ ಹಿಂದೆ ಅಲ್ಲಿಯೇ ತಂಗಿದ್ದರು.

2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ಮಾಡಿದ ಮೋದಿ ಉಪನಾಮ ಕುರಿತಾದ ಟೀಕೆಗಳಿಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್ ನ್ಯಾಯಾಲಯ, ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾದ ಮರುದಿನವೇ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಸೂರತ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ (ಆಗಸ್ಟ್ 4) ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸೂರತ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು. ನಂತರ ಸೋಮವಾರ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ.

ಸಂಸತ್ ಸ್ಥಾನದಿಂದ ಅನರ್ಹಗೊಂಡ ಬಳಿಕ ಸರ್ಕಾರ ನೀಡಿದ್ದ ಬಂಗಲೆಯನ್ನು ಏಪ್ರಿಲ್ 22ರೊಳಗೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್ ನೀಡಲಾಗಿತ್ತು. ಹೀಗಾಗಿ, ಅವರು ಕಳೆದ ಏಪ್ರಿಲ್‌ನಲ್ಲಿ ಈ ಬಂಗಲೆಯನ್ನು ಖಾಲಿ ಮಾಡಿ ತಾಯಿ ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಿದ್ದರು.

ಸತ್ಯವನ್ನು ಮಾತನಾಡಿದ್ದಕ್ಕಾಗಿ ನಾನು ಈ ಬೆಲೆ ತೆರುತ್ತಿದ್ದೇನೆ ಮತ್ತು ಜನರ ಸಮಸ್ಯೆಗಳ ಪರ ಧ್ವನಿ ಎತ್ತುವುದನ್ನು ಮುಂದುವರಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ