ನವದೆಹಲಿ: 2019 ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್ ಕ್ಷೇತ್ರದಿಂದ ಭರ್ಜರಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೊನೆಗೂ ವಯನಾಡ್ ಕೈ ಬಿಟ್ಟಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ವಯನಾಡ್ ಹಾಗೂ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದರು. ಈ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದ ರಾಹುಲ್ ಗಾಂಧಿಗೆ ಒಂದು ಕ್ಷೇತ್ರವನ್ನು ಆಯ್ದುಕೊಳ್ಳುವ ಅವಕಾಶವಿತ್ತು. ಹಾಗಾಗಿ ಅವರು ವಯನಾಡ್ ಕ್ಷೇತ್ರ ಕೈಬಿಟ್ಟು ರಾಯ್‌ಬರೇಲಿಯನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ.
ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧೆ ಮಾಡಲಿದ್ದಾರೆ.
ಸೋಮವಾರ (ಜೂನ್.17) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್ ಹಾಗೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ನಡೆದ ಮಹತ್ವದ ಸಭೆ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಕ್ಷೇತ್ರದ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು.
ರಾಗಾ ಅವರು ಯುಪಿಯ ರಾಯ್‌ಬರೇಲಿ ಉಳಿಸಿಕೊಂಡು ವಯನಾಡ್ ಕ್ಷೇತ್ರವನ್ನು ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ ಎಂದು ಖರ್ಗೆ ಅವರು ಘೋಷಿಸಿದರು.
ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಲ್ಲಿ ರಾಗಾ 6,87,649 ಮತ ಪಡೆದು 3,90,030 ಮತಗಳ ಅಂತರದಿಂದ ಗೆದ್ದರೆ, ಕೇರಳದ ವಯನಾಡಿನಲ್ಲಿ 6,47,445 ಮತ ಪಡೆದು 3,64,422 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.