ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
10 ಮಂದಿ ಪ್ರಮಾಣವಚನ : ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪದಗ್ರಹಣ ಸಮಾರಂಭಕ್ಕೆ ದೇಶದ ಹಲವು ಗಣ್ಯರಿಗೆ ಆಹ್ವಾನ : ಇನ್ನು ಪದಗ್ರಹಣ ಸಮಾರಂಭಕ್ಕೆ ದೇಶದ ವಿವಿಧ ರಾಜ್ಯದ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ನಾಯಕರನ್ನು ಆಹ್ವಾನಿಸಲಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪುದುಚೆರಿ ಮುಖ್ಯಮಂತ್ರಿ ಎನ್.ರಂಗಸ್ವಾಮಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.