ಬೆಂಗಳೂರು : ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಅರ್ಹತೆ, ಯೋಗ್ಯತೆ ಇಲ್ಲ. ಭ್ರಷ್ಟಾಚಾರ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.
ಜನರ ಮೇಲೆ ಪ್ರೀತಿ ಇಟ್ಟುಕೊಂಡು ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದಲ್ಲ. ಅಧಿಕಾರ, ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್ನವರು ಗ್ಯಾರಂಟಿ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಎರಡೇ ತಿಂಗಳಲ್ಲಿ ಜನ ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದರು.
ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ. ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವವರ ಬಗ್ಗೆ ಯಾಕೆ ಮಾತನಾಡಬೇಕು. ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇಂಥವರಿಂದ ಒಂದೇ ಒಂದು ಒಳ್ಳೆಯ ಕೆಲಸವನ್ನು ಬಯಸಲು ಸಾಧ್ಯವಿಲ್ಲ. ಇವರು ನಿರ್ನಾಮ ಆಗುವ ಹಾಗೇ ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಮಾರ್ಗದರ್ಶಿಯಾಗಿರಲಿ. ಗುಣಮಟ್ಟದ ಶಿಕ್ಷಣ ಹಾಗೂ ಆಡಳಿತದಲ್ಲಿ ತಮ್ಮ ತಾಕತ್ ತೋರಿಸಬೇಕು. ಮೋಸದ ಭಾಗ್ಯದಿಂದ ಅಧಿಕಾರ ಪಡೆದುಕೊಂಡಿದ್ದಾರೆ ಎಂದು ಹರಿಹಾಯ್ದರು.





