ಮಹಿಳಾ ಸಾಂತ್ವನ ಕೇಂದ್ರ ಸ್ಥಗಿತಗೊಳಿಸದಂತೆ ಸಿಎಂಗೆ ಸಿದ್ದು ಪತ್ರ

ಬೆಂಗಳೂರು: ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸುವ ನಿರ್ಧಾರ ಹಿಂತೆಗೆದುಕೊಳ್ಳಬೇಕೆಂದು ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಿಎಂಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲೇ ಯುವತಿಯರು ಮತ್ತು ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿರುವ ಪ್ರಕರಣಗಳು ವರದಿ ಆಗುತ್ತಲೇ ಇವೆ. ಹೀಗಿರುವಾಗ, ಮಹಿಳೆಯರ ನೆರವಿಗೆ ಇರುವ ಸಾಂತ್ವನ ಕೇಂದ್ರ ಮುಚ್ಚುವ ಸರ್ಕಾರದ ಕ್ರಮ ಮಹಿಳಾ ವಿರೋಧಿಯಾಗಿದೆ ಎಂದು ತಿಳಿಸಿದ್ದಾರೆ.

ನೊಂದ ಮತ್ತು ತುರ್ತು ಅಗತ್ಯ ಇರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ, ಆರ್ಥಿಕ ನೆರವು, ಶಿಕ್ಷಣ, ಉದ್ಯೋಗ, ಉಚಿತ ಕಾನೂನು ನೆರವು ಸೇರಿದಂತೆ ಹಲವು ರೀತಿಯ ಸಹಾಯ ಒಂದೇ ಸೂರಿನಡಿ ಸಿಗಬೇಕು ಎನ್ನುವ ಕಾಳಜಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಾಂತ್ವನ ಕೇಂದ್ರಗಳನ್ನು ನಿರ್ವಹಿಸಲಾಗುತ್ತಿತ್ತು. ಸ್ವಯಂ ಸೇವಾ ಸಂಸ್ಥೆಗಳ ನೆರವಿನಿಂದ ಈ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದವು. ಸಾಂತ್ವನ ಕೇಂದ್ರಗಳ ಆಪ್ತ ಸಮಾಲೋಚಕರಿಂದ ಇದುವರೆಗೂ ಸಹಸ್ರಾರು ಮಹಿಳೆಯರು ಸಾಂತ್ವನ ಮತ್ತು ಭರವಸೆ ಪಡೆದುಕೊಂಡಿದ್ದಾರೆ. ಈ ಕೇಂದ್ರಗಳು ನೊಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ ಆತ್ಮಹತ್ಯೆ, ಖಿನ್ನತೆ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುತ್ತಿದ್ದವು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೋವಿಡ್‌ ನೆಪದಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣ ಹೇಳಿ 71 ಸಾಂತ್ವನ ಕೇಂದ್ರಗಳನ್ನು ಬಂದ್‌ ಮಾಡಲಾಗಿದೆ. ರಾಜಧಾನಿ ಬೆಂಗಳೂರು ಮಹಿಳೆಯರ ಮೇಲೆ ಅತಿ ಹೆಚ್ಚು ದೌರ್ಜನ್ಯ ನಡೆಯುತ್ತಿರುವುದು ನಗರಗಳಲ್ಲಿ ಒಂದಾಗಿದೆ. ಹೀಗಿದ್ದೂ ಬೆಂಗಳೂರು ನಗರದಲ್ಲಿದ್ದ ಎಲ್ಲಾ ಸಾಂತ್ವನ ಕೇಂದ್ರಗಳನ್ನು ಬಂದ್‌ ಮಾಡಿರುವುದು ಅಕ್ಷಮ್ಯ. ಹೀಗಾಗಿ, ಬಂದ್‌ ಆಗಿರುವ ಸಾಂತ್ವನ ಕೇಂದ್ರಗಳನ್ನು ತಕ್ಷಣ ಆರಂಭಿಸಬೇಕು. ಉಳಿದ ಕೇಂದ್ರಗಳನ್ನು ಬಂದ್‌ ಮಾಡುವ ನಿರ್ಧಾರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

× Chat with us