ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ”ಯೆಲ್ಲೂ ಅಲರ್ಟ್’ ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಎರಡು ದಿನವೂ ಮೋಡ ಕವಿದ ವಾತಾವರಣ ಇದ್ದು, ಕೆಲವು ಕಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.