ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ರಕ್ಷಣೆಗೆ ‘ಮಿತ್ರಕಾಲ’ದ ವಿರುದ್ಧದ ಹೋರಾಟ ಇದಾಗಿದೆ ಎಂದು ಹೇಳಿದ್ದಾರೆ.
ಬಂಡವಾಳಶಾಹಿ ಮಿತ್ರರಿಗೆ ಪ್ರಧಾನಿ ನರೇಂದ್ರ ಮೋದಿ ನೆರವು ನೀಡುತ್ತಿದ್ದಾರೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಸರೆ! ಎಂದು ಅವರು ಹೇಳಿದ್ದಾರೆ.
ಮೋದಿ ಉಪನಾಮ ವ್ಯಂಗ್ಯ ಕುರಿತ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಜಾಮೀನು ನೀಡಿರುವ ಸೂರತ್ ನ್ಯಾಯಾಲಯ, ಮುಂದಿನ ವಿಚಾರಣೆ ಏ.13ಕ್ಕೆ ಮುಂದೂಡಿದೆ.
ಇಂದು ಸೂರತ್‌ಗೆ ಆಗಮಿಸಿದ ರಾಹುಲ್, ತಮಗೆ ಜೈಲು ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.
ಮೋದಿ ಉಪನಾಮ ವ್ಯಂಗ್ಯ ಕುರಿತ ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ಹಂತದ ನ್ಯಾಯಾಲಯ ಮಾ.23ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಜತೆಗೆ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನಲ್ಲಿರಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.





