Mysore
23
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಸಿಐಡಿಗೆ ತನಿಖೆ ಹಸ್ತಾಂತರ

ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ವಿಡಿಯೋ ಪ್ರಕರಣದ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಾಲೇಜಿನ ವಾಶ್‌ರೂಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದರು ಎನ್ನಲಾದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

ಜುಲೈ 18ರಂದು ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬಂದ ತಕ್ಷಣ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಚಾರ್ಯರು ಅಮಾನತು ಮಾಡಿದ್ದರು. ಪ್ರಕರಣ ಭಾರೀ ಸದ್ದು ಮಾಡಿದ್ದರಿಂದ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಜುಲೈ 26ರಂದು ಸುಮೊಟೋ ಪ್ರಕರಣವನ್ನು ದಾಖಲಿಸಿದ್ದರು. ಅದಾದ ಬಳಿಕ ತನಿಖಾಧಿಕಾರಿಯನ್ನು ಕೂಡ ಬದಲಾಯಿಸಿ, ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.

ಇನ್ನು, ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗವು ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್‌ ಉಡುಪಿಗೆ ಎರಡು ದಿನ ಭೇಟಿ ನೀಡಿ ತನಿಖೆ ನಡೆಸಿದ್ದರು. ಆದರೆ, ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಹುನ್ನಾರ ನಡೆಸುತ್ತಿದೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಜೊತೆಗೆ ಪ್ರಕರಣವನ್ನು ಎಸ್‌ಐಟಿಗೆ ವಹಿಸುವಂತೆ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಸರ್ಕಾರವನ್ನು ಆಗ್ರಹಿಸಿದ್ದರು.

ಈ ಬಗ್ಗೆ ಕರಾವಳಿಯ ಬಿಜೆಪಿ ಶಾಸಕರು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕೂಡ ಮನವಿ ಮಾಡಿದ್ದರು. ಎಬಿವಿಪಿ ಹಾಗೂ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಇದರ ನಡುವೆಯೇ ರಾಜ್ಯ ಸರ್ಕಾರ ಸೋಮವಾರ ಮಹತ್ವದ ಆದೇಶ ಹೊರಡಿಸಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದೆ. ಈ ಹಿನ್ನೆಲೆ ಸಿಐಡಿ ಪೊಲೀಸ್‌ ತಂಡವು ಮಂಗಳವಾರ ಉಡುಪಿಗೆ ಆಗಮಿಸಿ, ಎಸ್‌ಪಿ ಹಾಗೂ ತನಿಖಾಧಿಕಾರಿ ಜೊತೆ ಚರ್ಚಿಸಿ ಎಲ್ಲ ದಾಖಲೆಗಳನ್ನು ಪಡೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಏನಿದು ಉಡುಪಿ ವಿಡಿಯೋ ಪ್ರಕರಣ? : ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್‌ ಕಾಲೇಜಿನ ವಾಶ್‌ ರೂಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿಯ ವಿಡಿಯೋವನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ ಎಂದು ಹೇಳಲಾಗಿದೆ. ಜುಲೈ 18ರಂದು ಘಟನೆ ನಡೆದಿದ್ದು, ಕಾಲೇಜಿನಿಂದ ವಿದ್ಯಾರ್ಥಿನಿಯರನ್ನು ಅಮಾನತು ಕೂಡ ಮಾಡಲಾಗಿತ್ತು. ಅದಾದ ಬಳಿಕ ಭಾರೀ ಪ್ರತಿಭಟನೆ ಹಿನ್ನೆಲೆ ಜುಲೈ 26ರಂದು ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಸುಮೊಟೋ ಪ್ರಕರಣವನ್ನು ದಾಖಲಿಸಲಾಗಿತ್ತು. ಆ ನಂತರ ಮೂವರು ವಿದ್ಯಾರ್ಥಿನಿರು ಜಾಮೀನನ್ನು ಕೂಡ ಪಡೆದಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!