ಬಿಎಸ್‌ವೈ ಡಿನೋಟಿಫಿಕೇಷನ್‌ ಪ್ರಕರಣ: ಇಂದು ಸುಪ್ರೀಂನಲ್ಲಿ ಅರ್ಜಿ ವಿಚಾರಣೆ

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ವಿರುದ್ಧ ಹೈ ಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಚಿವ ಮುರುಗೇಶ್‌ ನಿರಾಶಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

2010-11ರಲ್ಲಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿ ನಂತರ ನಕಲಿ ದಾಖಲೆ ಹಾಗೂ ನಕಲಿ ಸಹಿ ಬಳಸಿ ಆ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಅವರು ತಮ್ಮಿಂದ ಹಿಂದಕ್ಕೆ ಪಡೆದಿದ್ದಾರೆ ಎಂದು ಉದ್ಯಮಿ ಎ.ಅಲಂ ಪಾಷಾ ಅವರು ಆರೋಪ ಮಾಡಿದ್ದರು. ಈ ಸಂಬಂಧ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿ.ಎಸ್. ಯಡಿಯೂರಪ್ಪ 2019ರಲ್ಲಿ ಹೈಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು‌. ಜನವರಿ 5ರಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಜಾಗೊಳಿಸಿ, ವಿಚಾರಣೆ ನಡೆಸುವಂತೆ ಆದೇಶಿಸಿತ್ತು.