ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ಕಾಂಗ್ರೆಸ್ ನಾಯಕರು ನಿರ್ಧಾರ

ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೋನಾ ಮೂರನೇ ಅಲೆ ನಿಯಂತ್ರಿಸಲು ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಕೊರೋನಾ ನಿಯಮಗಳನ್ನ ಉಲ್ಲಂಘಿಸಿ 11 ದಿನಗಳ ಕಾಲ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ಕೈಗೊಂಡಿದ್ದರು. ಇಂದು (ಜ.13) ಐದನೇ ದಿನದ ಪಾದಯಾತ್ರೆ ನಡೆಯಬೇಕಿತ್ತು. ಆದರೆ ನಿನ್ನೆ ಹೈಕೋರ್ಟ್ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಂಡಿಲ್ಲ ಅಂತ​ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಹೀಗಿದ್ದೂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಾದಯಾತ್ರೆ ಮುಂದುವರಿಸುತ್ತೇವೆ ಎಂಬ ಹಠಕ್ಕೆ ಬಿದ್ದಿದ್ದರು. ಈ ಕುರಿತು ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ್ದರು. ಸಭೆ ನಡೆಸಿದ ಬಳಿಕ ಹೈಕಮಾಂಡ್ ಸೂಚನೆಯಂತೆ ಐದನೇ ದಿನಕ್ಕೆ ಪಾದಯಾತ್ರೆ ನಿಲ್ಲಿಸಲು ನಿರ್ಧರಿಸಲಾಗಿದೆ.