ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ಅರಣ್ಯ ಅಧಿಕಾರಿಗಳು ಮೂರು ದಿನಗಳ ಕಾಲ ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದಾರೆ.
ಚಾಮರಾಜನಗರ ಜಿಲ್ಲಾ ಕೊಳ್ಳೇಗಾಲ ಜೆಎಂಎಫ್ ಕೋರ್ಟ್ ಆರೋಪಿಗಳನ್ನು ಮೂರು ದಿನಗಳ ಕಾಲ ಅರಣ್ಯ ಇಲಾಖೆ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ತನಿಖೆ ವೇಳೆ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.
ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ವಿಷಪ್ರಾಶನದಿಂದ ಸಾವನ್ನಪ್ಪಿದ್ದವು. ಪ್ರೀತಿಯಿಂದ ಸಾಕಿದ್ದ ಹಸುವನ್ನು ಹುಲಿ ಕೊಂದು ಹಾಕಿತ್ತು. ಇದರಿಂದ ಬೇಸತ್ತಿದ್ದ ಮಾದುರಾಜು ಹಾಗೂ ನಾಗರಾಜು ಸತ್ತ ಹಸುವಿಗೆ ವಿಷವಿಟ್ಟಿದ್ದರು. ಹಸುವನ್ನು ತಿಂದಿದ್ದ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸಾವನ್ನಪ್ಪಿದ್ದವು.





