ಗುಂಡ್ಲುಪೇಟೆ: ಹೊಸ ವರ್ಷದ ಪಾರ್ಟಿ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಸೋಗೆ ಗ್ರಾಮದಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಮೂಲತಃ ಮಂಡ್ಯ ಜಿಲ್ಲೆಯವರಾದ, ತಾಲ್ಲೂಕಿನ ಬೊಮ್ಮಲಾಪುರ ಸೆಸ್ಕ್ ಕಚೇರಿಯ ಅಸಿಸ್ಟೆಂಟ್ ಪವರ್ ಮ್ಯಾನ್ ಪ್ರತಾಪ್ (೨೮) ಮತ್ತು ಇವರ ಸ್ನೇಹಿತ ಕೊಂಗಳ್ಳಯ್ಯ (೪೫) ಮೃತಪಟ್ಟವರು.
ಹೊಸವರ್ಷದ ಸಂಭ್ರಮಾಚರಣೆಗೆ ಗುಂಡ್ಲುಪೇಟೆಗೆ ತೆರಳಿ ವಾಪಸ್ ಬರುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಕಾರಿನ ಮೇಲೆ ಮುರಿದು ಬಿದ್ದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೆರಕಣಾಂಬಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿದ್ದಾರೆ. ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.