ಹನೂರು: ಹೆಜ್ಜೇನು ದಾಳಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾದೇಶ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ.
ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆ ಗದ್ದೆ ಗ್ರಾಮದ ನಿವಾಸಿ ಮಾದೇಶ್ (40) ಮೃತ ಪಟ್ಟ ವ್ಯಕ್ತಿಯಾಗಿದ್ದಾನೆ.
ಘಟನೆ ವಿವರ: ಜೀರಿಗೆ ಗದ್ದೆ ಗ್ರಾಮದ ನಿವಾಸಿ ಮಾದೇಶ್ ಎಂಬುವವರು ಶನಿವಾರ ಶನಿಮಹಾತ್ಮ ದೇವಸ್ಥಾನಕ್ಕೆ ಹೋಗಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದೆ. ನಂತರ ಚಿಕಿತ್ಸೆ ಪಡೆದು ವಾಪಸ್ ಮನೆಗೆ ತೆರಳಿದ್ದರು. ನಂತರ ಭಾನುವಾರ ಮಧ್ಯಾಹ್ನ 2 ಗಂಟೆ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಹಿನ್ನೆಲೆ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಈ ಸಂಬಂಧ ಮೃತನ ತಾಯಿ ಬಸಮ್ಮ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.