ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿದ ಬೆನ್ನಲ್ಲೇ, ಜಿಲ್ಲೆಯ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ರಸ್ತೆಯ ಪಕ್ಕದಲ್ಲೇ 20ಕ್ಕೂ ಹೆಚ್ಚು ಮಂಗಗಳ ಮಾರಣಹೋಮ ನಡೆದಿದ್ದು, ವಿಷಪ್ರಾಶನದಿಂದ ಕೋತಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಇತ್ತೀಚೆಗೆ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿದ್ದವು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಘಟನೆ ಮಾಸುವ ಮುನ್ನವೇ ಇದೀಗ 20ಕ್ಕೂ ಹೆಚ್ಚು ಮಂಗಗಳ ಶವ ಪತ್ತೆಯಾಗಿದ್ದು, ಮಂಗಗಳಿಗೆ ವಿಷಪ್ರಾಶನದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇನ್ನು ಘಟನೆಯಲ್ಲಿ ಎರಡು ಕೋತಿಗಳು ಬದುಕುಳಿದಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರ ಅಸ್ವಸ್ಥವಾಗಿರುವ ಕೋತಿಗಳನ್ನು ಗುಂಡ್ಲುಪೇಟೆ ಪಶು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.





