ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಬೆಚ್ಚಿಬೀಳಿಸುವ ಘಟನೆ ಬೆನ್ನಲ್ಲೇ, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಅಮಾನವೀಯ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ.
ಹನೂರು ವಲಯದ ಉಡುತೊರೆಹಳ್ಳ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ನೀರು ಕುಡಿಯಲು ಬಂದಿದ್ದ ಕಡವೆ ಮೇಲೆ ನಾಡಬಂದೂಕಿನಿಂದ ಗುಂಡು ಹಾರಿಸಿ ಬೇಟೆಯಾಡಿರುವ ದುಷ್ಕರ್ಮಿಗಳು, ನಂತರ ಅದನ್ನು ಮೂರು ಭಾಗಗಳಾಗಿ ಕತ್ತರಿಸಿ ಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡು, ಆರೋಪಿಗಳು ಕಡವೆ ಮಾಂಸದ ಚೀಲಗಳನ್ನು ಸ್ಥಳದಲ್ಲೇ ಬಿಟ್ಟು ದಟ್ಟ ಅರಣ್ಯದಲ್ಲಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಬಫರ್ ವಲಯದ ವಲಯ ಅರಣ್ಯಾಧಿಕಾರಿ ಮಹೇಶ್ ಅವರು ಪ್ರಕರಣ ದಾಖಲಿಸಿಕೊಂಡು, ಪರಾರಿಯಾಗಿರುವ ಬೇಟೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತ ಬೇಟೆಗಾರರ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ಗಸ್ತು ಹೆಚ್ಚಿಸುವಂತೆ ವನ್ಯಪ್ರೇಮಿಗಳು ಆಗ್ರಹಿಸಿದ್ದಾರೆ.
ಪಶುವೈದ್ಯಾಧಿಕಾರಿ ಡಾ. ಶಿವರಾಜು ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.



