ಹನೂರು: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಬಮೂಲ್ ನಿರ್ದೇಶಕ ಹರೀಶ್ ಕುಮಾರ್ ಹಾಗೂ ಕುಟುಂಬದವರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಊರಟ್ಟಿನ ಸೇವೆ ಸಲ್ಲಿಸಿದರು.
ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಹರೀಶ್ ಕುಮಾರ್ ಕುಟುಂಬವು, ಡಿಸಿಎಂ ಡಿಕೆ ಶಿವಕುಮಾರ್ ಅವರ ಭಾವಚಿತ್ರವನ್ನು ಹಿಡಿದು ದೇವಸ್ಥಾನದ ಸುತ್ತಲೂ ಪ್ರದಕ್ಷಿಣೆ ಹಾಕಿ ದೇವರ ದರ್ಶನ ಪಡೆದು ಡಿಕೆಶಿ ಮುಖ್ಯಮಂತ್ರಿಯಾಗಲಿ ಎಂದು ಹರಕೆ ಹೊತ್ತಿದ್ದಾರೆ.
ನಂತರ ಮಾತನಾಡಿದ ಅವರು, ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಉತ್ತಮವಾಗಿ ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಹಗಲಿರುಳು ಶ್ರಮಿಸಿದ್ದಾರೆ. ಕಳೆದ ಎರಡೂವರೆ ವರ್ಷಗಳಿಂದ ರಾಜ್ಯದ ಉಪಮುಖ್ಯಮಂತ್ರಿಗಳಾಗಿ, ಜಲ ಸಂಪನ್ಮೂಲ ಸಚಿವರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಆಡಳಿತ ನೀಡಿದ್ದಾರೆ.
ಡಿಕೆ ಶಿವಕುಮಾರ್ ಪಕ್ಷದ ವರಿಷ್ಠರು ನೀಡಿರುವ ಎಲ್ಲಾ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ದಿನದ 24 ಗಂಟೆಯೂ ಪಕ್ಷದ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಎಂತಹ ಕಷ್ಟದ ಸಂದರ್ಭದಲ್ಲಿಯೂ ಪಕ್ಷಕ್ಕಾಗಿ ಎಲ್ಲ ರೀತಿಯ ತ್ಯಾಗವನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಎಂದೇ ಪ್ರಸಿದ್ಧಿಯಾಗಿರುವ ನಮ್ಮ ನಾಯಕ ಡಿಕೆ ಶಿವಕುಮಾರ್ರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.
ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಎಂಬ ನಾಮಕರಣದೊಂದಿಗೆ 5 ವಲಯಗಳನ್ನಾಗಿ ಮಾಡಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಪಣತೊಟ್ಟಿದ್ದಾರೆ,
ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡಲು “ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಮೇಕೆದಾಟಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿದ್ದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ತಮಿಳುನಾಡಿನ ಅರ್ಜಿಯನ್ನು ವಜಾಗೊಳಿಸಿರುವುದರಿಂದ ಮೇಕೆದಾಟು ಯೋಜನೆ, ಪೂರ್ಣಗೊಂಡರೆ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಕಾವೇರಿ ನೀರು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ದೊರಕಲಿದೆ ಎಂದರು.
ಇವೇ ವೇಳೆ ಬಮೂಲ್ ನಿರ್ದೇಶಕ ಹರೀಶ್ ರವರ ಕುಟುಂಬಸ್ಥರು ಹಾಗೂ ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗದವರು ಹಾಜರಿದ್ದರು.





