ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ನಾಗಣಾಪುರ ಬ್ಲಾಕ್-02 ಹುಣಸೆತಾಳ ಕಂಡಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡಾನೆಯೊಂದರ ಕಳೆಬರ ಪತ್ತೆಯಾಗಿರುವ ಘಟನೆ ನಡೆದಿದೆ.
ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಗಂಡಾನೆಗೆ ಸುಮಾರು 40 ರಿಂದ 45 ವರ್ಷ ವಯಸ್ಸಾಗಿದೆ. ಸತ್ತ ಆನೆಯಿಂದ 02 ದಂತಗಳನ್ನು ಬೇರ್ಪಡಿಸಿ ಇಲಾಖೆ ವಶ ಪಡಿಸಿಕೊಂಡಿದೆ. ನಂತರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಂದ್ರ ಸೂಚನೆ ಮೇರೆಗೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ, ನಿಯಮಾನುಸಾರ ಕಳೆಬರವನ್ನು ಅರಣ್ಯ ಪ್ರದೇಶದಲ್ಲೇ ಬಿಡಲಾಗಿದೆ.
ಕಾಡಾನೆಯು ಸ್ವಾಭಾವಿಕವಾಗಿ ಮೃತಪಟ್ಟಿರುವುದಾಗಿ ಅರಣ್ಯಾಧಿಕಾರಿಗಳು ದೃಢಪಟ್ಟಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗಳು ಗಸ್ತು ನಡೆಸುತ್ತಿದ್ದ ವೇಳೆ ಕೊಳೆತೆ ವಾಸನೆ ಬಂದ ಕಾರಣ ಸುತ್ತಮುತ್ತಲಿನ ಪ್ರದೇಶದಲ್ಲಿ ಪರಿಶೀಲಿಸಿದಾಗ ಆನೆಯೊಂದು ಸಾವನ್ನಪ್ಪಿರುವುದು ಕಂಡುಬಂದಿದೆ. ಕೂಡಲೇ ಸಿಬ್ಬಂದಿಗಳು ಹಾಗೂ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಕಾಡಾನೆಯೊಂದು ಕೊಳೆತ ಸ್ಥಿತಿಯಲ್ಲಿ ಸತ್ತಿರುವುದು ಖಚಿತವಾಗಿದೆ.