ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಚಾಮರಾಜನಗರ ಮೂಲದ ಸುಮನ್ ಎಂಬುವವರೇ ಗಾಯಗೊಂಡಿದ್ದು ಇವರನ್ನು ನಿಶಾಂತ್ ರವರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಘಟನೆಯ ವಿವರ : ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ ಮಾರಮ್ಮ ದೇವಸ್ಥಾನಕ್ಕೆ ಇಬ್ಬರು ಸ್ನೇಹಿತರ ಜೊತೆ ತೆರಳಿ ದೇವರ ದರ್ಶನ ಪಡೆದು ವಾಪಸ್ ಕೊಳ್ಳೇಗಾಲದತ್ತ ಬರುತ್ತಿದ್ದ ಕಾರಿಗೆ ಮಳವಳ್ಳಿಯತ್ತ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಸುಮನ್ ತೀವ್ರ ಗಾಯಗೊಂಡಿದ್ದಾರೆ.
ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ನಿಶಾಂತ್ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹನೂರು ಪಟ್ಟಣದ ಮಹಾಮನೆಗೆ ಆಗಮಿಸುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸುಮನ್ ರವರು ಗಾಯಗೊಂಡು ನರಳಾಡುತ್ತಿರುವುದನ್ನು ಗಮನಿಸಿ ಅವರ ಕಾರಿನಲ್ಲಿಯೇ ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಮೈಸೂರಿಗೆ ಕಳುಹಿಸಿಕೊಟ್ಟಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




