ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ಬಸ್‌ವೊಂದು ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶಕ್ಕೆ ನುಗ್ಗಿರುವ ಘಟನೆ ಜರುಗಿದೆ.
ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನಿಂದ ಆಗಮಿಸಿ ಮದುವೆ ಮುಗಿದ ನಂತರ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಳುಬೆಟ್ಟದ ನಾಲ್ಕನೇ ತಿರುವಿನಲ್ಲಿ ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಪ್ರಯಾಣಿಕರ ವಾಹನ ಅಪಘಾತಕ್ಕೀಡಾಗಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಹದೇಶ್ವರ ಬೆಟ್ಟ ಠಾಣೆಯ ಇನ್ಸ್‌ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಕ್ರೇನ್ ಕರೆಯಿಸಿ ಮಿನಿ ಬಸ್ ಎಳೆದು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.





