ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲ್ಲೂರಿನಲ್ಲಿ ಇಂದಿನಿಂದ ಜನವರಿ.17ರವರೆಗೆ ಅದ್ಧೂರಿಯಾಗಿ ಜಾತ್ರೆ ನಡೆಯಲಿದೆ.
ಜಾತ್ರೆಯ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪ್ರಾಣಿಬಲಿ ನಿಷೇಧ ಕಾಯ್ದೆ 1959 ಮತ್ತು ನಿಯಮಗಳು 1963 ಅನ್ವಯ ದೇವಸ್ಥಾನಗಳಲ್ಲಿ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಕಾನೂನಿಗೆ ವಿರುದ್ಧವಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ 1973ರ ಸಿ.ಆರ್.ಪಿ.ಸಿ111(1)(3) ಅಡಿಯಲ್ಲಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.
ಇನ್ನು ಜಾತ್ರೆ ಎಂದರೆ ಹಚ್ಚೆ ಹಾಕಿಸಿಕೊಳ್ಳುವುದು ಸಾಮಾನ್ಯವಾದ್ದರಿಂದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಜಾತ್ರೆಯಲ್ಲಿ ಹಚ್ಚೆ ಹಾಕುವುದನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗೆ ಕೋರಿದ ಹಿನ್ನೆಲೆಯಲ್ಲಿ ಈ ಬಾರಿ ಹಚ್ಚೆ ಹಾಕುವುದನ್ನು ಸಹ ನಿಷೇಧ ಮಾಡಲಾಗಿದೆ.





