ಚಾಮರಾಜನಗರ: ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ ನೀಡಿದ್ದಾರೆ.
ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ಹಲವು ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಪ್ರವಾಹ ಎದುರಿಸುತ್ತಿರುವ ಗ್ರಾಮಗಳನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು, ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಜನತೆಗೆ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತ ಎಲ್ಲಾ ಮುನ್ನೆಚ್ಚರಿಕೆ ಹಾಗೂ ಸುರಕ್ಷಿತ ಕ್ರಮಗಳನ್ನು ತೆಗೆದುಕೊಂಡಿದೆ. ಯಾರು ಕೂಡ ವದಂತಿಗಳಿಗೆ ಕಿವಿಗೊಡಬೇಡಿ. ತುರ್ತು ಸಂದರ್ಭಗಳಲ್ಲಿ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ತಿಳಿಸಿ.
ಮನೆಗಳು ಸಂಪೂರ್ಣ ಮುಳುಗಡೆಯಾದರೆ ಯಾರೂ ಭಯಪಡಬೇಡಿ. ಎಲ್ಲರೂ ಕಾಳಜಿ ಕೇಂದ್ರಗಳಿಗೆ ತೆರಳಿ. ಜಾನುವಾರುಗಳಿಗೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿ ಎಂದು ಮನವಿ ಮಾಡಿದ್ದಾರೆ.
ಇನ್ನು ಕೊಳ್ಳೇಗಾಲ ನದಿ ಪಾತ್ರದ ಜನತೆಯ ಬಗ್ಗೆ ಪೊಲೀಸರು ಹೆಚ್ಚಿನ ನಿಗಾ ಇಡಲಾಗಿದ್ದು, ಜನತೆ ಸಂಕಷ್ಟಕ್ಕೆ ಸಿಲುಕದಂತೆ ತೀವ್ರ ನಿಗಾ ಇಡಲಾಗಿದೆ.