ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಾಳೆಯಿಂದ ದೀಪಾವಳಿ ಜಾತ್ರೆ ಆರಂಭವಾಗಲಿದೆ.
ಈ ಹಿನ್ನೆಲೆಯಲ್ಲಿ ದೇವಾಲಯವನ್ನು ವಿಧ ವಿಧದ ಹೂವು-ಹಣ್ಣುಗಳು, ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿದೆ.
ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆಯಲು ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಿಂದಲೂ ಹೆಚ್ಚಿನ ಸಾರ್ವಜನಿಕರು ಬರಲಿದ್ದು, ಎಲ್ಲರಿಗೂ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.
ಇನ್ನು ನವೆಂಬರ್.2ರಂದು ದೇವಾಲಯದಲ್ಲಿ ಮಹಾ ರಥೋತ್ಸವ ನಡೆಯಲಿದ್ದು, ಲಕ್ಷಾಂತರ ಮಂದಿ ರಥೋತ್ಸವವನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಈ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ಕೈಗೊಳ್ಳಲಾಗಿದ್ದು, ಬರುವ ಜನತೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಇನ್ನು ಮಹದೇಶ್ವರ ಬೆಟ್ಟಕ್ಕೆ ನಾಳೆಯಿಂದ ದ್ವಿಚಕ್ರ ವಾಹನಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಬೆಟ್ಟದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.