ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು.
ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದ ಆವರಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಹನೂರು ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ 23 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಈಗಾಗಲೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ದೈನಂದಿನ ಅವಶ್ಯಕತೆ ತಕ್ಕಂತೆ ನೀರು ಪೂರೈಕೆ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ರಾಜ್ಯದ ಪ್ರತಿಯೊಬ್ಬರಿಗೂ ಮೂಲಭೂತ ಸೌಲಭ್ಯ ಒದಗಿಸುವುದು ಸರ್ಕಾರದ ಜವಾಬ್ದಾರಿ. ಅದರಂತೆ ಕುಡಿಯುವ ನೀರಿನ ಸಮಸ್ಯೆಯನ್ನು ಜವಾಬ್ದಾರಿಯುತವಾಗಿ ಯಶಸ್ವಿಯಾಗಿ ನಿರ್ವಹಿಸಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ರಾಜ್ಯದಲ್ಲಿ ಉತ್ತಮ ಮಳೆಯಾದರೆ ನೀರಿನ ಸಮಸ್ಯೆ ಬಗೆಹರಿಯಲಿದೆ ವರುಣರಾಯ ಕೃಪೆ ತೋರಿಸಬೇಕು ಎಂದು ತಿಳಿಸಿದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ 15ನೇ ಹಣಕಾಸಿನ ಅನುದಾನವನ್ನು ಸಂಪೂರ್ಣವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚನೆ ನೀಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳನ್ನು ತಡವಾಗಿಯಾದರೂ ಮಾಡಬಹುದು. ಆದರೆ ಕುಡಿಯಲು ನೀರಿಲ್ಲದಿದ್ದರೆ ಸಮಸ್ಯೆ ಉಂಟಾಗುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಅನುದಾನವನ್ನು ಸಮರ್ಪಕವಾಗಿ ಒಡೆಯುವ ನೀರಿನ ಬಳಕೆಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಹನೂರು ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ ಡಿಪಿಆರ್ ಆಗಿದ್ದು, ಅನುದಾನಕ್ಕೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದರು.
ಈ ವೇಳೆ ಮಾಧ್ಯಮದವರು ರೈತ ಮುಖಂಡರು 491 ಕೋಟಿ ವೆಚ್ಚದ ಡಿಪಿಆರ್‌ಗೆ ಅನುಮೋದನೆ ನೀಡಿ ಪ್ರಸ್ತುತ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡಬೇಕು ಎಂದು ಪಾದಯಾತ್ರೆ ಹೊರಟಿದ್ದಾರಲ್ಲ ಎಂಬ ಪ್ರಶ್ನೆಗೆ ರೈತರು ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ ಹೊರಟಿದ್ದಾರೆ ಇದಕ್ಕೆ ಬೇಡ ಎನ್ನಲು ಆಗುತ್ತದೆಯೇ ಎಂದರು.
ಕಾವೇರಿ ನದಿ ಮೂಲದಿಂದ ದಂಟಳ್ಳಿ ಮಾರ್ಗವಾಗಿ ಏತ ನೀರಾವರಿ ಯೋಜನೆ ಮಾಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುಮಾರು ನಾಲ್ಕು ಕಿಲೋಮೀಟರ್ ಹೆಚ್ಚು ಅರಣ್ಯ ಪ್ರದೇಶದಲ್ಲಿ ಪೈಪ್ ಲೈನ್ ಮಾಡುವ ಅಗತ್ಯತೆ ಇದೆ ಇದಲ್ಲದೆ ಏರಿಳಿತ ಇರುವುದರಿಂದ ತೊಂದರೆ ಆಗುತ್ತದೆ ಎಂದು ಮಾಹಿತಿ ನೀಡಿದ್ದಾರೆ ರೈತರಿಗೆ ಈಗಾಗಲೇ ಮನವರಿಕೆ ಮಾಡಲಾಗಿದೆ. ಆದರೂ ಈ ಭಾಗದಿಂದಲೇ ನೀರಾವರಿ ಯೋಜನೆ ಕಲ್ಪಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ ಎಂದರು.
ಪ್ರತಿ ವರ್ಷದ ಬೇಸಿಗೆ ಸಮಯದಲ್ಲಿ ಹನೂರು ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ. ಸಮಸ್ಯೆ ಬಗೆಹರಿಸಲು ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಮಾತನಾಡಿ, ಜಿಲ್ಲೆಯಲ್ಲಿ 10 ಸಾವಿರ ಜಾನುವಾರುಗಳಿದ್ದು ಅಗತ್ಯತೆಗೆ ತಕ್ಕಂತೆ ಮೇವು ಶೇಖರಣೆ ಮಾಡಲಾಗಿದೆ. ಒಂದು ಹಸುವಿಗೆ ಪ್ರತಿ ದಿನಕ್ಕೆ 6 ಕೆಜಿಯಂತೆ ಅಂದಾಜಿಸಲಾಗಿದೆ. ಹನೂರು ತಾಲೂಕು ವ್ಯಾಪ್ತಿಗೆ 22, ಗುಂಡ್ಲುಪೇಟೆ 23, ಚಾಮರಾಜನಗರ ವ್ಯಾಪ್ತಿಯ ಜಾನುವಾರುಗಳಿಗೆ 18 ವಾರ ಮೇವು ಕೊಡುವಷ್ಟು ಸಂಗ್ರಹಣೆ ಮಾಡಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ ರೈತರಿಗೆ ಮೇವಿನ ಕಿಟ್ ವಿತರಣೆ ಮಾಡುವಂತೆ ಸೂಚನೆ ನೀಡಿದರು.
ನೆರೆ ತಮಿಳುನಾಡು ರಾಜ್ಯಕ್ಕೆ ಮೇವು ಸಾಗಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಈ ಕೂಡಲೇ ಜಿಲ್ಲಾಧಿಕಾರಿಗಳು ಮೇವು ಸಾಕಾಣಿಕೆ ಮಾಡದಂತೆ ನಿರ್ಬಂಧ ಹೇರಬೇಕು. ಹಸು ಕರುಗಳಿಗೆ ನಿರ್ಮಾಣ ಮಾಡಿರುವ ತೊಟ್ಟಿಗಳಿಗೆ ನೀರು ತುಂಬಿಸಿ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು ಎಂದರು.
ರೈತರಿಗೆ ಪ್ರತಿದಿನ ಏಳು ಗಂಟೆ ತ್ರೀ ಫೇಸ್ ವಿದ್ಯುತ್ ನೀಡುವಂತೆ ಸರ್ಕಾರದಿಂದ ನಿಯಮವಿದೆ ಆದರೆ ರೈತರ ಗಳಿಗೆ ಮೂರು ಗಂಟೆ ಕಡಿತಗೊಳಿಸಿ ವಿದ್ಯುತ್ ನೀಡುತ್ತಿರುವುದರಿಂದ ತೊಂದರೆಯಾಗುತ್ತಿದೆ ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪ್ರತಿನಿತ್ಯ 7ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಶಾಸಕ ಎಂ ಆರ್ ಮಂಜುನಾಥ್, ಜಿಲ್ಲಾಧಿಕಾರಿ ಶ್ರೀ ರೂಪ, ಸಿಇಒ ಮೋನರೋತ್, ಎಡಿಸಿ ಜವರೇಗೌಡ, ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಡಿಸಿಎಫ್ ಭಾಸ್ಕರ್, ತಹಸಿಲ್ದಾರ್ ಚೈತ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.





