ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.
ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್ ಬೇಲಿಯನ್ನೇ ನಾಶಪಡಿಸಿವೆ.
ಇದಲ್ಲದೇ ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಮುಸುಕಿನ ಜೋಳ, ಕಬ್ಬು, ಶುಂಠಿ ಸೇರಿದಂತೆ ಅನೇಕ ಫಸಲುಗಳನ್ನು ತುಳಿದು ನಾಶಪಡಿಸಿವೆ.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆನೆಗಳ ಹಾವಳಿಯನ್ನು ತಡೆಗಟ್ಟಲು ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಇಷ್ಟೆಲ್ಲಾ ಘಟನೆಗಳು ನಡೆದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.