ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ ಮೂರು ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ತಲಾ 15 ಲಕ್ಷ ರೂ. ಪರಿಹಾರ ನೀಡಿದ್ದಾರೆ.
ಶಾಗ್ಯ ಸಮೀಪದ ಕಾವೇರಿ ವನ್ಯಜೀವಿಧಾಮದಲ್ಲಿ ಬೇಟೆಗಾರರು ಅಕ್ರಮವಾಗಿ ಪ್ರವೇಶಿಸಿ ಕಾಡು ಪ್ರಾಣಿಗಳ ಬೇಟೆಗೆ ಆಗಮಿಸಿರುವ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನಾಲ್ವರ ಮೇಲೆ ಗುಂಡಿನ ದಾಳಿ ನಡೆದಿತ್ತು.
ಗುಂಡಿನ ದಾಳಿಯಲ್ಲಿ ಹನೂರು ತಾಲ್ಲೂಕಿನ ಮರಿಮಂಗಲದ ಅಂತೋಣಿ ಸ್ವಾಮಿ, ಜಗನ್ನಾಥದೊಡ್ಡಿ ಗ್ರಾಮದ ಜಾನ್ ರೋಸ್ ಪೀಟರ್ ಹಾಗೂ ಲಾಸರ್ ದೊಡ್ಡಿಯ ಕುಮಾರ್ ಎಂಬ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮತ್ತೋರ್ವ ಆರೋಪಿ ಮಹಿಮಾ ದಾಸ್ ಪರಾರಿಯಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೂವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿನ ದಾಳಿ ನಡೆಸಿರುವುದನ್ನು ವಿರೋಧಿಸಿ ಕುಟುಂಬಸ್ಥರು, ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಎರಡು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಆರ್. ಮಂಜುನಾಥ್ ಅವರು ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸರ್ಕಾರದ ವತಿಯಿಂದ ತಲಾ 5 ಲಕ್ಷ ಹಾಗೂ ವೈಯಕ್ತಿಕವಾಗಿ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಜೊತೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.
ಶಾಸಕರ ಮಾತಿಗೆ ಕುಟುಂಬಸ್ಥರು ಹಾಗೂ ಗ್ರಾಮದ ಮುಖಂಡರು ಒಪ್ಪಿಗೆ ಸೂಚಿಸಿ ಪ್ರತಿಭಟನೆ ಕೈಬಿಟ್ಟರು.
ಸೋಮವಾರ ಗ್ರಾಮದಲ್ಲಿ ನಡೆದ ಅಂತ್ಯಕ್ರಿಯೆ ಸ್ಥಳಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ನುಡಿದಂತೆ ಮೂರು ಕುಟುಂಬಗಳಿಗೆ ತಲಾ 15 ಲಕ್ಷ ರೂ. ಪರಿಹಾರ ನೀಡಿ ಮಾನವೀಯತೆ ಮೆರೆದರು.
ಈ ವೇಳೆ ತಹಸಿಲ್ದಾರ್ ಚೈತ್ರ ಹಾಜರಿದ್ದರು.




