ಚಾಮರಾಜನಗರ: ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಎಫೆಕ್ಟ್‌ನಿಂದಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮಳೆಗೆ ಚಳಿಯ ವಾತಾವರಣ ನಿರ್ಮಾಣವಾಗಿದೆ.
ಕಳೆದ ತಡರಾತ್ರಿಯಿಂದಲೂ ಚಾಮರಾಜನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ವಾಹನ ಸವಾರರು ಪರದಾಟ ನಡೆಸುತ್ತಿದ್ದು, ವಿದ್ಯುತ್ ಸಂಪರ್ಕ ಕೂಡ ಅಲ್ಲಲ್ಲಿ ಕಡಿತವಾಗಿದೆ.
ಭಾರೀ ಮಳೆಯ ನಡುವೆ ಶೀತ ಗಾಳಿಯೂ ಬೀಸುತ್ತಿದ್ದು, ಜನರು ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಳೆ ಹೀಗೆಯೇ ಮುಂದುವರಿದರೆ ನಾಳೆಯೂ ಕೂಡ ರಜೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದ್ದು, ರೈತರು ತಮ್ಮ ತಮ್ಮ ಜಮೀನುಗಳಿಗೆ ತೆರಳಲು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಬಹಳ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.