ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಶಾಸಕ ಎಂಆರ್ ಮಂಜುನಾಥ್ ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದರು.
ನಂತರ ಮಾತನಾಡಿದ ಅವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳ ಬಡಾವಣೆಗಳಲ್ಲಿ ಪ್ರತ್ಯೇಕವಾಗಿ ಯುವಕರ ಬಳಗ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ನನ್ನ ಕೈಲಾದ ಮಟ್ಟಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದೇನೆ. ಶ್ರಾವಣ ಮಾಸ ಮುಕ್ತಾಯವಾದ ನಂತರ ಗೌರಿ ಗಣೇಶ ಹಬ್ಬ ಮೊದಲು ಬರುವುದರಿಂದ, ಸಾವಿರಾರು ವರ್ಷಗಳಿಂದ ಸಾಂಪ್ರದಾಯವಾಗಿ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದೇವೆ. ಹಬ್ಬ ಆಚರಣೆ ಮಾಡುವುದರಿಂದ ಶಾಂತಿ ನೆಮ್ಮದಿ ಸಿಗುತ್ತದೆ. ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ಅನಾಹುತಗಳಿಗೂ ಅವಕಾಶ ಮಾಡಿಕೊಡದೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಬೇಕು ಎಂದು ತಿಳಿಸಿದರು.
ನಮ್ಮ ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತಾಪಿ ವರ್ಗಕ್ಕೆ ಬೆಳೆದಿರುವ ಎಲ್ಲಾ ಬೆಳೆಗಳಿಗೆ ನಿಗದಿತ ಬೆಲೆ ಸಿಕ್ಕಿ, ಆರ್ಥಿಕವಾಗಿ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲಿ ಎಂದು ಪ್ರಾರ್ಥಿಸಿದರು.
ಇದೇ ವೇಳೆ ಕ್ಷೇತ್ರದ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯ ಕೋರಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳ ಬಡಾವಣೆಗಳಲ್ಲಿ 300ಕ್ಕೂ ಹೆಚ್ಚು ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಹಾಯ ಮಾಡಿದ್ದಾರೆ.
ಈ ವೇಳೆ ಪಟ್ಟಣ ಪಂಚಾಯ್ತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಜಾದಳ ಮುಖಂಡರು ಹಾಜರಿದ್ದರು.