ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಂಕರ್ ಎಂಬುವವರು ತಮಗೆ ಸೇರಿದ ಮೇಕೆಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಚಿರತೆಯು ಮೇಕೆಯನ್ನು ಕೊಂದು ಹಾಕಿದೆ.
ಈ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಇವುಗಳನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಓಂಕಾರ್ ಅರಣ್ಯ ವ್ಯಾಪ್ತಿಯ ಸಿಬ್ವಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೇಕೆ ಸಾವಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ತಾಲ್ಲೂಕಿನ ಬರಗಿ ಗ್ರಾಮದ ಪ್ರಕಾಶ್ ಎಂಬುವವರ ಜಮೀನಿನಲ್ಲಿ ಚಿರತೆ ದಾಳಿ ನಡೆಸಿ ಕರು ಬಲಿಯಾಗಿರುವ ಘಟನೆ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಳ್ಳುತ್ತಿದ್ದು, ರೈತರು ಕಳವಳ ವ್ಯಕ್ತಪಡಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.





