ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಕಳೆದ ತಡರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು ಬೆಳೆ ನಾಶ ಮಾಡಿರುವ ಘಟನೆ ನಡೆದಿದೆ.
ಗ್ರಾಮದ ಮಹದೇವಪ್ಪ ಹಾಗೂ ನಾಗಪ್ಪ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಹೀರೇಕಾಯಿ ಬೆಳೆಯನ್ನು ಕಾಡಾನೆಗಳ ದಾಳಿಯಿಂದ ಸಂಪೂರ್ಣ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಉತ್ತಮ ಇಳುವರಿ ಕೊಟ್ಟಿದ್ದ ಪರಿಣಾಮ ಈ ಬಾರಿ ಹೆಚ್ಚಿನ ಆದಾಯದ ನಿರೀಕ್ಷೆಯಲ್ಲಿದ್ದ ರೈತರು ಈಗ ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು, ಸಂಜೆಯಾದರಂತೂ ಜಮೀನುಗಳಿಗೆ ಹೋಗಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಿನ ಅನಾಹುತ ಆಗುವ ಮುಂಚೆ ಎಚ್ಚೆತ್ತುಕೊಂಡು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.