ಹನೂರು: ರಾಜ್ಯದ ಹಿಂದುಳಿದ ವರ್ಗದವರು, ಅಸಹಾಯಕರ ಪರ ಸದಾ ಕಾಳಜಿ ಹೊಂದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.
ಹನೂರು ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಸಿ.ಮಹದೇವಪ್ಪ ಅಭಿಮಾನಿ ಬಳಗ ಸಮೃದ್ಧಿ ಫೌಂಡೇಶನ್, ಚಾರಿಟೇಬಲ್ ಟ್ರಸ್ಟ್ ಬೆಂಗಳೂರು, ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಪ್ರತಿಯೊಬ್ಬರು ಇಂದಿನ ದಿನಗಳಲ್ಲಿ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ಆರೋಗ್ಯವಂತರಾಗಿದ್ದಾರೆ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು. ಈ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಸ್ ಸಿ ಮಹದೇವಪ್ಪರವರ ಹುಟ್ಟು ಹಬ್ಬದ ಪ್ರಯುಕ್ತ ಸಾಮಾಜಿಕ ಕಾರ್ಯಕ್ರಮ ಆಯೋಜನೆ ಮಾಡಿರುವುದರಿಂದ ನೂರಾರು ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಶಿಬಿರಕ್ಕೆ ಬಂದಿರುವ ಶಿಬಿರಾರ್ಥಿಗಳು ತಮ್ಮ ಯಾವುದೇ ಸಮಸ್ಯೆಗಳಿದ್ದರೂ ಮುಚ್ಚುಮರೆ ಇಲ್ಲದೆ ವೈದ್ಯಾಧಿಕಾರಿಗಳಿಗೆ ತಮ್ಮ ಸಮಸ್ಯೆ ಹೇಳಿಕೊಂಡರೆ ಉತ್ತಮ ಚಿಕಿತ್ಸೆ ಸಿಗಲಿದೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಕೊಡಿಸಿ ಗುಣಮುಖರನ್ನಾಗಿ ಮಾಡಿ ಮತ್ತೆ ವಾಪಸ್ ತಂದುಬಿಡುವ ಕಾರ್ಯವನ್ನು ಸಹ ಆಸ್ಪತ್ರೆಯವರು ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದರು.
ಕಾರ್ಯಕ್ರಮದಲ್ಲಿ ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ನಿರ್ದೇಶಕರಾದ ಶಾಹುಲ್ ಅಹಮದ್, ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ಪಿಎಪಿಎಂಸಿ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.





