ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದಿದೆ.
ಬೆಂಗಳೂರು ಮೂಲದ ಲಗ್ಗೆರೆ ನಿವಾಸಿಗಳಾದ ಗಣೇಶ್ ಹಾಗೂ ನಾಗರಾಜು ಶುಕ್ರವಾರ ಮುಂಜಾನೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹನೂರಿನಿಂದ ಕೊಳ್ಳೇಗಾಲಕ್ಕೆ ಹೋಗುತ್ತಿದ್ದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂಬದಿಯಲ್ಲಿ ಕುಳಿತಿದ್ದ ನಾಗರಾಜು ತೀವ್ರ ಗಾಯಗೊಂಡಿದ್ದರಿಂದ 108 ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪರಿಚಿತ ವಾಹನ ಪತ್ತೆಗೆ ಕಾರ್ಯಚರಣೆ: ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನದ ಪತ್ತೆಗೆ ಇನ್ಸ್‌ಪೆಕ್ಟರ್ ಆನಂದಮೂರ್ತಿ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಅನುಮಾನದ ಮೇಲೆ ಒಂದು ಗೂಡ್ಸ್ ಬುಲೆರೋ ವಾಹನವನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





