ಮಹಾದೇಶ್ ಎಂ ಗೌಡ
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ.
ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬುವವರೇ ಚಿರತೆ ದಾಳಿಗೆ ಮೃತಪಟ್ಟಿರುವ ಪಾದಯಾತ್ರಿಕರಾಗಿದ್ದಾರೆ.
ಘಟನೆ ವಿವರ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ನೂರಾರು ಸಂಖ್ಯೆಯಲ್ಲಿ ಪಾದಯಾತ್ರೆ ತೆರಳಿದ್ದರು. ಮಂಗಳವಾರ ರಾತ್ರಿ ತಾಳಬೆಟ್ಟದಲ್ಲಿ ವಾಸ್ತವ್ಯ ಹೂಡಿ ಬುಧವಾರ ಬೆಳಗ್ಗೆ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಹೊರಟಿದ್ದರು. ಬುಧವಾರ ಬೆಳಗ್ಗೆ ರಂಗಸ್ವಾಮಿ ಒಡ್ಡಿನ ಸಮೀಪದ ಪಾದಯಾತ್ರಿಕರ ಮಾರ್ಗದಲ್ಲಿ ಕುಳಿತಿದ್ದ ಚಿರತೆ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬುವರನ್ನು ಚಿರತೆ ಎಳೆದೊಯ್ದಿದೆ. ಜೊತೆಯಲ್ಲಿದ್ದ ಸ್ನೇಹಿತರು ಕಿರುಚಾಡಿಕೊಂಡು ಚಿರತೆ ಓಡಿಸಲು ಎಷ್ಟೇ ಪ್ರಯತ್ನ ಪಟ್ಟರು ಪ್ರವೀಣ್‌ರನ್ನು ಅರಣ್ಯದೊಳಗೆ ಎಳೆದುಕೊಂಡು ಹೋಗಿದೆ. ಭಯಭೀತರಾದ ಸ್ನೇಹಿತರು ಮಲೆ ಮಹದೇಶ್ವರ ಬೆಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಶವವನ್ನು ಪತ್ತೆ ಹಚ್ಚಿದ್ದಾರೆ. ಆದರೆ ಈವರೆಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಲಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಾರದೆ ನಿರ್ಲಕ್ಷ ವಹಿಸಿದ್ದಾರೆ. ಕಳೆದ ಒಂದು ವಾರದಿಂದ ಸತತವಾಗಿ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡರೂ ಅರಣ್ಯ ಇಲಾಖೆಯವರು ಸೂಕ್ತ ಕ್ರಮ ವಹಿಸದೇ ಇರುವುದರಿಂದ ಪಾದಯಾತ್ರಿಕರ ಮೇಲೆ ಚಿರತೆ ದಾಳಿ ನಡೆಸಿದೆ ಎಂದು ಪ್ರಜ್ಞಾವಂತ ನಾಗರಿಕರು ಆಕ್ರೋಶ ಹೊರಹಾಕಿದ್ದಾರೆ.




