ಹನೂರು: ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಸಾರ್ವಜನಿಕರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ.
ಮಲೆಮಹದೇಶ್ವರ ಬೆಟ್ಟಕ್ಕೆ ಅಮಾವಾಸ್ಯೆ, ಹುಣ್ಣಿಮೆ, ಹಬ್ಬ-ಹರಿದಿನ, ವಾರಾಂತ್ಯ ಹಾಗೂ ರಜಾ ದಿನಗಳು ಬಂದರೆ ಸಮರ್ಪಕ ಬಸ್ ಸೌಲಭ್ಯ ಸಿಗದೇ ಪ್ರಯಾಣಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹದೇಶ್ವರ ಬೆಟ್ಟಕ್ಕೆ ತೆರಳುವವರು ಗಂಟೆಗಟ್ಟಲೇ ನಿಲ್ದಾಣದಲ್ಲಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಸಂಜೆ ವೇಳೆಗಂತೂ ಕೊಳ್ಳೇಗಾಲ ಹಾಗೂ ಹನೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಬಸ್‌ನ ಗರಿಷ್ಠ ಆಸನ ಸಾಮರ್ಥ್ಯದ ದುಪ್ಪಟ್ಟು ಸಂಖ್ಯೆಯ ಪ್ರಯಾಣಿಕರನ್ನು ತುಂಬಿಸಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿರುವ ಪ್ರಯಾಣಿಕರು ಹೆಚ್ಚುವರಿ ಬಸ್‌ಗಳನ್ನು ಒದಗಿಸುವಂತೆ ಆಗ್ರಹಿಸಿದ್ದಾರೆ.