Mysore
17
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಹೊಗೇನಕಲ್‌ ಫಾಲ್ಸ್‌ನಲ್ಲಿ ಅಕ್ರಮ ಮದ್ಯ ಮಾರಾಟ ; ಅಧಿಕಾರಿಗಳ ಮೌನ?

ಹನೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಫಾಲ್ಸ್ ನಲ್ಲಿ ಪ್ರವಾಸಿಗರಿಗೆ ರಾಜಾರೋಷವಾಗಿಯೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಸಂಬಂಧಪಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೇ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಹೊಗೇನಕಲ್ ಫಾಲ್ಸ್ ನ ಕೆಲವರು ಅಕ್ರಮ ಮಧ್ಯ ಮಾರಾಟವನ್ನು ದಂಧೆಯಾಗಿ ಮಾಡಿಕೊಂಡಿದ್ದಾರೆ.

ಕರ್ನಾಟಕದ ನಯಾಗರ ಫಾಲ್ಸ್ ಎಂದೇ ಪ್ರಸಿದ್ಧಿ ಪಡೆದಿರುವ ಹೊಗೇನಕಲ್ ಫಾಲ್ಸ್ ಪ್ರವಾಸಿ ತಾಣವಾಗಿದ್ದು, ಇಲ್ಲಿ ತೆಪ್ಪ ವಿಹಾರಕ್ಕೆ ಅವಕಾಶ ಕಲ್ಪಿಸಲಾಗಿದೆ . ಹಾಗಾಗಿ ಇಲ್ಲಿಗೆ ಕರ್ನಾಟಕ ಹಾಗೂ ತಮಿಳುನಾಡಿನ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ವಾರಾಂತ್ಯದ ದಿನಗಳಲ್ಲಿ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಇದರಲ್ಲಿ ಕೆಲ ಯುವಕರು ನಗರ ಪ್ರದೇಶಗಳಿಂದ ಮೋಜು ಮಸ್ತಿಗಾಗಿಯೇ ಆಗಮಿಸುತ್ತಾರೆ. ಇದರ ಲಾಭವನ್ನು ಪಡೆದ ಸಮೀಪದ ಮಾರಿಕೊಟ್ಟಾಯ ಗ್ರಾಮದ ಕೆಲ ಸ್ಥಳೀಯರು ಅಕ್ರಮವಾಗಿ ಮದ್ಯ ಸಂಗ್ರಹಿಸಿಕೊಂಡು ಪ್ರವಾಸಿಗರು ತೆಪ್ಪದಲ್ಲಿ ವಿಹಾರದಲ್ಲಿ ಇರುವಾಗಲೇ ಸ್ಥಳಕ್ಕೆ ತೆರಳಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಕೆಲ ಪ್ರವಾಸಿಗರು ತೆಪ್ಪ ವಿಹಾರದಲ್ಲಿಯೇ ಮದ್ಯ ಸೇವಿಸಿ ಮೋಜು ಮಸ್ತಿಯಲ್ಲಿ ತೊಡಗುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಕುಡಿದ ಅಮಲಿನಲ್ಲಿ ಪ್ರಾಣಾಪಾಯ ಸಂಭವಿಸಿದರೆ ಯಾರು ಹೊಣೆ? ಎಂಬ ಪ್ರಶ್ನೆ ಮೂಡಿದೆ.

ಫಾಲ್ಸ್ನಲ್ಲಿ ಪ್ರವಾಸಿಗರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಅಬಕಾರಿ, ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿದಿದೆ ಎಂದು ಹೇಳಲಾಗುತ್ತಿದೆ. ಆದರೆ ಯಾವುದೇ ಕ್ರಮಕೈಗೊಳ್ಳದೇ ಮೌನ ವಹಿಸಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವುದರ ಮೂಲಕ ಫಾಲ್ಸ್ ನಲ್ಲಿ ಕಾನೂನು ಬಾಹಿರ ಚಟುವಟಿಕೆಗೆ ಕಡಿವಾಣ ಹಾಕುವರೇ ಕಾದುನೋಡಬೇಕಿದೆ.

 

ಹೊಗೆನಕಲ್ ಫಾಲ್ಸ್ ನಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಕೂಡಲೇ ಪರಿಶೀಲನೆ ನಡೆಸಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು. ದಯಾನಂದ್, ಅಬಕಾರಿ ನಿರೀಕ್ಷಕ, ಕೊಳ್ಳೇಗಾಲ

Tags:
error: Content is protected !!