ಕೊಳ್ಳೇಗಾಲ: ಕಬಿನಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ.
ಸಾಮಾನ್ಯವಾಗಿ ಜುಲೈ ಹಾಗೂ ಆಗಸ್ಟ್‌ನಲ್ಲಿ ಕಬಿನಿ ಹಾಗೂ ಕೆಆರ್‌ಎಸ್‌ನಿಂದ ನೀರು ಹೊರಬಿಡುವುದರಿಂದ ನದಿ ಪಾತ್ರದ ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತವೆ. ತಾಲ್ಲೂಕಿನ ಮುಳ್ಳೂರು, ಹಳೆ ಹಂಪಾಪುರ, ದಾಸನಪುರ, ಹಳೆ ಅಣಗಳ್ಳಿ, ಹರಳೆ, ಸರಗೂರು, ಧನಗೆರೆ, ಸತ್ತೇಗಾಲ, ಯಡಕುರಿಯಾ ಗ್ರಾಮಗಳಲ್ಲಿ ಆತಂಕ ಮನೆಮಾಡುತ್ತದೆ.
ಕಾವೇರಿ ನದಿಯಲ್ಲಿ ನೀರು ಹೆಚ್ಚಾದ ಕೂಡಲೇ 9 ಗ್ರಾಮಗಳು ಭಾಗಶಃ ಮುಳುಗಡೆಯಾಗುತ್ತವೆ. ಸಾವಿರಾರು ಎಕರೆ ಕೃಷಿ ಭೂಮಿಯೂ ಜಲಾವೃತಗೊಂಡು ಬೆಳೆ ನಷ್ಟ ಸಂಭವಿಸುತ್ತದೆ. ಈ ಬಾರಿಯೂ ಮುಳುಗಡೆಯಾಗಬಹುದು ಎಂದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಕಳೆದ ವರ್ಷ ಸರಿಯಾಗಿ ಮಳೆಯಾಗದ ಕಾರಣ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರಲಿಲ್ಲ. ಆದರೆ ಈ ವರ್ಷ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಗಳು ಮುಳುಗಡೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬಂತಾಗಿದೆ.
ಇನ್ನೂ ಕೇರಳದ ವಯನಾಡು ಹಾಗೂ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಬಿನಿ ಹಾಗೂ ಕೆಆರ್‌ಎಸ್ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಗ್ರಾಮಗಳಿಗೆ ಜಲಕಂಟಕ ಎದುರಾಗಿದೆ.
ಮುಳುಗಡೆ ಭೀತಿಯಿಂದ ಬೇಸತ್ತು ಹೋಗಿರುವ ಗ್ರಾಮಸ್ಥರುಗಳು, ಗ್ರಾಮವನ್ನೇ ತೊರೆದು ಹೋಗುವ ನಿರ್ಧಾರ ಮಾಡಿದ್ದಾರೆ.