ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣ ವನ್ನಾಗಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶಕ್ತಿ ಯೋಜನೆ ಪ್ರಾರಂಭವಾದ ನಂತರ ಹಬ್ಬ ಹರಿದಿನ, ಜಾತ್ರಾ ಮಹೋತ್ಸವ ಸರ್ಕಾರಿ ರಜಾ ದಿನಗಳು ಸೇರಿದಂತೆ ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತಾದಿಗಳು ಕೆಎಸ್ಆರ್ ಟಿಸಿ ಬಸ್ ಮುಖಾಂತರ ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಆದರೆ ಪ್ರಸ್ತುತ ಇರುವ ಬಸ್ ನಿಲ್ದಾಣದಲ್ಲಿ ಬರುವ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಮೂಲಭೂತ ಸೌಲಭ್ಯಗಳು ಇಲ್ಲದೆ ಇರುವುದರಿಂದ ಹೈಟೆಕ್ ಬಸ್ ನಿಲ್ದಾಣ ಮಾಡಲಾಗುತ್ತಿದೆ ಎಂದು ಹೇಳಿದರು.
ಈಗಾಗಲೇ ಕಳೆದ ಏಪ್ರಿಲ್ ತಿಂಗಳಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡಲು ಅನುಮೋದನೆ ನೀಡಿದ್ದಾರೆ. ಪ್ರಾಧಿಕಾರದ ಸಹಯೋಗದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಿ ಶ್ರೀ ಕ್ಷೇತ್ರಕ್ಕೆ ಬರುವಂತಹ ಭಕ್ತಾದಿಗಳು,ಪ್ರಯಾಣಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಹೈಟೆಕ್ ಶೌಚಾಲಯಗಳು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.
ಹೋಟೆಲ್ ಗೆ ಭೇಟಿ
ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿರುವ ಹೋಟೆಲ್ ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ವಚ್ಛತೆ ಇಲ್ಲದೆ ಇರುವುದು ಗಮನಕ್ಕೆ ಬಂದ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಪ್ರತಿನಿತ್ಯ ಹೋಟೆಲ್ ನಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಬರುವಂತಹ ಭಕ್ತಾದಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು ಎಂದು ತಾಕೀತು ಮಾಡಿದರು.
ಪರಿಶೀಲನೆ ವೇಳೆ ಕೆಎಸ್ಆರ್ ಟಿಸಿ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಕೆಎಸ್ಆರ್ಟಿಸಿ ವಿಭಾಗಿಯ ಅಧಿಕಾರಿ ದಶರತ್, ಅಭಿಯಂತರ ಮಹೇಶ್ ಪ್ರಾಧಿಕಾರದ ಅಭಿಯಂತರರಾದ ಸೆಲ್ವ ಗಣಪತಿ, ಕೊಳ್ಳೇಗಾಲ ಬಸ್ ನಿಲ್ದಾಣದ ಮೇಲುಸ್ತುವಾರಿ ಚರಣ್, ಮ.ಬೆಟ್ಟದ ಟಿಸಿ ಚಿನ್ನಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು





