Mysore
17
scattered clouds

Social Media

ಸೋಮವಾರ, 12 ಜನವರಿ 2026
Light
Dark

ಮಲೆಮಹದೇಶ್ವರ ಬೆಟ್ಟ: ನೂತನ ಸೋಲಾರ್‌ ಘಟಕ ಉದ್ಘಾಟಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15 ಲಕ್ಷ ಉಳಿತಾಯವಾಗಲಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ಸಮೀಪ 8.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸೋಲಾರ್ ಘಟಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವ, ಹಬ್ಬ ಹರಿದಿನ ಸೇರಿದಂತೆ ಪ್ರತಿನಿತ್ಯ ಹೆಚ್ಚಿನ ವಿದ್ಯುತ್ ಅವಶ್ಯಕತೆ ಇದೆ. ಆದರೆ ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆ ಆಗುತ್ತಿದ್ದರಿಂದ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ದೇವಾಲಯದಲ್ಲಿ ವಿದ್ಯುತ್ ಸಮಸ್ಯೆ ಕಾಡುತ್ತಿತ್ತು. ಈ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕಲ್ಪಿಸುವ ದೃಷ್ಟಿಯಿಂದ 1.1 ಮಿಲಿ ವ್ಯಾಟ್ ವಿದ್ಯುತ್ ಸಾಮರ್ಥ್ಯವುಳ್ಳ ಸೋಲಾರ್ ಪ್ಲಾಂಟ್ ಪ್ರಾರಂಭಿಸಲಾಗಿದೆ. ಇದರಿಂದ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ದಿನನಿತ್ಯ 24 ಗಂಟೆಯೂ ಸಹ ವಿದ್ಯುತ್ ಇರಲಿದೆ. ಇದರಿಂದ ಭಕ್ತಾದಿಗಳಿಗೆ ಹಾಗೂ ಇನ್ನಿತರ ಸೇವೆಗಳಿಗೆ ಅನುಕೂಲವಾಗಲಿದೆ ಎಂದರು.

ಕ್ಯೂಲೈನ್ ಕಾಮಗಾರಿ ಮುಗಿಸಿ: ತಿರುಪತಿ ಮಾದರಿಯಲ್ಲಿ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳಿಗೆ 45 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡುವುದರ ಜೊತೆಗೆ ದರ್ಶನ ಪಡೆಯಲು ವಿಶೇಷ ಕ್ಯೂ ಲೈನ್ ನಿರ್ಮಾಣ ಮಾಡಲಾಗಿದೆ. ಈ ಕಾಮಗಾರಿಯು ಇನ್ನೆರಡು ತಿಂಗಳಲ್ಲಿ ಪೂರ್ಣಗೊಂಡು ಭಕ್ತಾದಿಗಳ ಬಳಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಕ್ರಾಂತಿ ಜಾತ್ರಾ ಮಹೋತ್ಸವ ಪ್ರಾರಂಭವಾದರೆ ಪ್ರತಿ ತಿಂಗಳು ಶಿವರಾತ್ರಿ, ಯುಗಾದಿ, ಅಮಾವಾಸ್ಯೆ ಜಾತ್ರಾ ಮಹೋತ್ಸವಗಳು ಬರುವುದರಿಂದ ಭಕ್ತಾದಿಗಳ ಅನುಕೂಲಕ್ಕಾಗಿ ಡಾರ್ಮೆಟ್ರಿ ನಿರ್ಮಾಣ ಮಾಡಲಾಗುತ್ತಿದೆ ಈ ಕಾಮಗಾರಿಯು ಸಹ ನಿಗದಿತ ಅವಧಿಯಲ್ಲಿ ಪೂರ್ಣಗೊಂಡ ಭಕ್ತರ ಬಳಕೆಗೆ ದೊರಕಬೇಕು ಎಂದರು.

ವಿವಿಧ ಕಾಮಗಾರಿಗಳ ಪರಿಶೀಲನೆ: 5 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಹಾಗೂ ರಸ್ತೆ ಕಾಮಗಾರಿಯನ್ನು ಶಾಸಕ ಎಂ.ಆರ್.ಮಂಜುನಾಥ್ ಪರಿಶೀಲನೆ ನಡೆಸಿದರು. ಇದೆ ವೇಳೆ ಗುತ್ತಿಗೆದಾರರಿಗೆ ಗುಣಮಟ್ಟ ಕಾಪಾಡಿಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿ ನಡೆಯುವ ವೇಳೆ ಸಂಬಂಧಪಟ್ಟ ಅಭಿಯಂತರರು ಸ್ಥಳದಲ್ಲಿಯೇ ಇದ್ದು ಕಾಮಗಾರಿಯ ಮೇಲುಸ್ತುವಾರಿ ನೋಡಿಕೊಳ್ಳಬೇಕು ಎಂದರು.

ದಾಸೋಹ ಭವನಕ್ಕೆ ಅತಿ ಶೀಘ್ರದಲ್ಲಿ ಚಾಲನೆ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿರುವ ಹಿನ್ನೆಲೆ ಏಕಕಾಲಕ್ಕೆ 5 ಸಾವಿರ ಭಕ್ತಾದಿಗಳು ಪ್ರಸಾದ ಸ್ವೀಕರಿಸುವ ದಾಸೋಹ ಭವನವನ್ನು 92 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಕ್ರಮವಹಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅತಿ ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ಇದೇ ವೇಳೆ ಮಾತನಾಡಿದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎಈ ರಘು ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 45 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಕ್ಯೂ ಲೈನ್ ಕಾಮಗಾರಿಯು ಯುಗಾದಿ ಜಾತ್ರೆ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಪ್ರಾಯೋಗಿಕವಾಗಿ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗುವುದು, ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಲೋಕೋಪಯೋಗಿ ಇಲಾಖೆಯ ಎಇಇ ಚಿನ್ನಣ್ಣ, ಇಂಜಿನಿಯರ್ ಸಂತೋಷ್, ಸೆಲ್ವಗಣಪತಿ, ವಿಸ್ತಾರ ಕನ್ಸಲ್ಟೆಂಟ್ಸ್, ಎಲ್ ಎಲ್ ಪಿ ಗಳಾದ ಶ್ರೀಧರ್, ಮನೋಜ್, ಕೃಷ್ಣನ್, ಮುಖಂಡರುಗಳಾದ ಚಿನ್ನವೆಂಕಟ, ಡಿಕೆ ರಾಜು, ಗೋವಿಂದ, ವಿಜಯ್ ಕುಮಾರ್, ಎಸ್.ಆರ್ ಮಹದೇವ್ ಸುರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!