ಹನೂರು: ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಾಹನ ಸವಾರರನ್ನು ಪೊಲೀಸರು ತಡೆದು ವಿಚಾರಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗಾಂಜಾ ಬಿಸಾಡಿ ಪರಾರಿಯಾಗಿರುವ ಘಟನೆ ಜರುಗಿದೆ.
ಗಾಂಜಾ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣಪತಿ ಪ್ರತಿಷ್ಠಾಪನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಹನೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿ ವರ್ಗದವರು ಬಂಡಳ್ಳಿ ರಸ್ತೆಯಲ್ಲಿ ಗಸ್ತು ಮಾಡುತ್ತಿದ್ದಾಗ ಬಂಡಳ್ಳಿ ರಸ್ತೆಯಿಂದ ಹನೂರು ಪಟ್ಟಣಕ್ಕೆ ಆಗಮಿಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದಿದ್ದಾರೆ.
ಈ ವೇಳೆ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್ ನೀನು ಯಾವ ಊರು, ನಿನ್ನ ಹೆಸರೇನು ಎಂದು ಕೇಳುತ್ತಿದ್ದಾಗ ಕುಮಾರ್ ಎಂದು ತಿಳಿಸಿ ಪರಾರಿಯಾಗಿದ್ದಾನೆ. ದ್ವಿಚಕ್ರ ವಾಹನದಲ್ಲಿ ಬಿಳಿ ಬಣ್ಣದ ಚೀಲವಿದ್ದು ಇದನ್ನು ಪರಿಶೀಲನೆ ಮಾಡಿದಾಗ 1.128 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಾಗಣೆ ಮಾಡಲು ಬಳಸಿದ ದ್ವಿಚಕ್ರ ವಾಹನ ಹಾಗೂ ಒಣಗಾಂಜಾವನ್ನು ವಶಕ್ಕೆ ಪಡೆದುಕೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ, ಕೊಳ್ಳೇಗಾಲ ಡಿಎಸ್ಪಿ ಧರ್ಮೇಂದ್ರ, ಇನ್ಸ್‌ಪೆಕ್ಟರ್ ಆನಂದ್ ಮೂರ್ತಿ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್ ಪ್ರಕರಣ ದಾಖಲಿಸಿದ್ದಾರೆ.





