ಹನೂರು: ತಾಲ್ಲೂಕಿನ ಪಳನಿಮೇಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ.ಆರ್.ಮಂಜುನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹನೂರು ಶೈಕ್ಷಣಿಕ ವಲಯದ ಪಳನಿ ಮೇಡು ಗ್ರಾಮದ ಶಾಲೆಗೆ ಭೇಟಿ ನೀಡಿ ಪ್ರತಿ ದಿನ ಬಿಸಿಯೂಟ, ಮೊಟ್ಟೆ , ರಾಗಿ ಮಾಲ್ಟ್, ಬಾಳೆಹಣ್ಣು ನೀಡುತ್ತಿದ್ದಾರೆಯೇ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದರು. ಈ ವೇಳೆ ವಿದ್ಯಾರ್ಥಿಗಳು ಪ್ರತಿದಿನ ಮೊಟ್ಟೆ ಊಟ ಕೊಡುತ್ತಿರುವುದಾಗಿ ತಿಳಿಸಿದರು.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಪ್ರತಿಯೊಬ್ಬರು ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಚೆನ್ನಾಗಿ ಓದಿ ತಂದೆ ತಾಯಿಗಳಿಗೆ, ಪಾಠ ಮಾಡುವ ಶಿಕ್ಷಕರಿಗೆ ಕೀರ್ತಿ ತಂದುಕೊಡಬೇಕು ಎಂದು ತಿಳಿಸಿದರು.
ಗ್ರಾಮಸ್ಥರು ಕೆಲವು ಕೊಠಡಿಗಳು ಶಿಥಿಲವಾಗಿದ್ದು, ಬಳಕೆಗೆ ಯೋಗ್ಯವಿಲ್ಲ, ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ತೊಂದರೆಯಾಗುತ್ತಿದೆ, ಹೊಸ ಕೊಠಡಿ ನಿರ್ಮಾಣ ಮಾಡಿಕೊಡಬೇಕು ಎಂದು ಶಾಸಕರ ಬಳಿ ಮನವಿ ಮಾಡಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂದಿನ ದಿನಗಳಲ್ಲಿ ಹೊಸ ಕೊಠಡಿಗೆ ಹೆಚ್ಚಿನ ಅನುದಾನ ನೀಡಲಾಗುವುದು. ಈಗಾಗಲೇ ಶಿಥಿಲಗೊಂಡಿರುವ ಕೊಠಡಿಯನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಪರಿಶೀಲಿಸಲು ಶಾಸಕ ಎಂ.ಆರ್.ಮಂಜುನಾಥ್ ಅವರು, ವಿದ್ಯಾರ್ಥಿಗಳ ಜೊತೆ ಕುಳಿತು ಅನ್ನ, ಬೇಳೆ ಸಾಂಬಾರ್ ಊಟ ಸವಿದರು.





