ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ ನಿರ್ದೇಶಕ ಪಿ. ಶಿವಶಂಕರ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿಯ ಸದಸ್ಯರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ೨೦೨೬-೨೭ನೇ ಸಾಲಿನ ಕ್ರಿಯಾ ಯೋಜನೆಯನ್ನು ಯುಕ್ತದಾರ ತಂತ್ರಾಂಶದ ಸಹಯೋಗದೊಂದಿಗೆ ವೈಜ್ಞಾನಿಕವಾಗಿ ತಯಾರಿಸಬೇಕು. ಅಂತರ್ಜಲ ಮಟ್ಟದ ಸುಧಾರಣೆಗೆ ಅಗತ್ಯವಿರುವ ಕೊಳವೆಬಾವಿ ಮರುಪೂರಣ ಪಿಟ್ ಗಳ ನಿರ್ಮಾಣ, ಚೆಕ್ ಡ್ಯಾಂಗಳ ನಿರ್ಮಾಣ ಹಾಗೂ ಸಸಿ ನೆಡುವ ಕಾಮಗಾರಿಗಳನ್ನು ಆದ್ಯತೆ ಮೆರೆಗೆ ಅನುಷ್ಠಾನಗೊಳಿಸಬೇಕು ಎಂದರು.
ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅಟಲ್ ಭೂಜಲ್ ಯೋಜನೆಯಡಿ ನೀರಿನ ಬಳಕೆ ಹಾಗೂ ನೀರಿನ ಸಂರಕ್ಷಣೆಯ ಕಾಮಗಾರಿಗಳು ಮತ್ತು ಚಟುವಟಿಕೆಗಳ ಕುರಿತು ಮಾಹಿತಿ ಪಡೆದರು.
ಇದನ್ನೂ ಓದಿ:-ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಕೇಂದ್ರ ಅಂತರ್ಜಲ ಮಂಡಳಿಯ ವಿಜ್ಞಾನಿ ಡಾ. ಬೇಬಿ ಶ್ವೇತಾ, ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿಯ ಸದಸ್ಯರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಇಮ್ಯಾನುವಲ್ ಸಂತೋಷ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಇಇ ರಮೇಶ್ ಕುಮಾರ್, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇಅರಸ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಬಳಿಕ ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ, ಅಟ್ಟುಗೂಳಿಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೈಗೊಂಡಿರುವ ಜಲ ಸಂರಕ್ಷಣೆ ಕುರಿತಾದ ಕಾಮಗಾರಿ ಸ್ಥಳಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ ನಿರ್ದೇಶಕ ಪಿ. ಶಿವಶಂಕರ್ ರವರು ಭೇಟಿ ನೀಡಿ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿದರು.





