ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೂತನ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನೂರು ತಾಲ್ಲೂಕು ಕೇಂದ್ರದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ. ಕಟ್ಟಡ ನಿರ್ಮಾಣ ಮಾಡಲು 8.60 ಕೋಟಿ ಅನುದಾನ ನೀಡಲಾಗಿದೆ. ಹನೂರು ತಾಲ್ಲೂಕು ಕೇಂದ್ರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೂ ಸಹ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗುಂಡಾಲ್ ಜಲಾಶಯ ವ್ಯಾಪ್ತಿಯಲ್ಲಿ ಬರುವ ಸರಣಿ ಕೆರೆಗಳ ಸಮಗ್ರ ಅಭಿವೃದ್ಧಿ, ಪೀಡಲ್ ನಾಲೆಗಳ ಅಭಿವೃದ್ಧಿ ಅಡ್ಡಮೋರಿ ಕಾಮಗಾರಿಗಳ ಅಭಿವೃದ್ಧಿಗೆ 50 ಕೋಟಿ ವೆಚ್ಚದ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.
ಪ್ರಾಧಿಕಾರ ರಚನೆ: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ ರಾಚಪ್ಪಾಜಿ ಹಾಗೂ ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ದೇವಸ್ಥಾನದ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ ಎಂದರು.





