ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ನೂತನ ಕೊಠಡಿ ನಿರ್ಮಾಣ ಮಾಡಿಕೊಡುವಂತೆ ಶಿಕ್ಷಕ ಮಹೇಂದ್ರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹನೂರು ತಾಲ್ಲೂಕಿನ ತೊಳಸಿಕೆರೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಜಿಲ್ಲಾಧಿಕಾರಿರವರನ್ನು ಭೇಟಿ ಮಾಡಿ ಶಿಕ್ಷಕ ಮಹೇಂದ್ರ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ತೊಳಸಿಕೆರೆ ಗ್ರಾಮದಲ್ಲಿ ಕಳೆದ 20 ವರ್ಷಗಳ ಹಿಂದೆ ಶಾಲಾ ಕಟ್ಟಡ ನಿರ್ಮಾಣ ಮಾಡಿದ್ದು, ಇದೀಗ ಕೊಠಡಿಗಳು ಶಿಥಿಲಗೊಂಡಿದೆ. ಮಳೆಗಾಲದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನ ಕೊಠಡಿ ನಿರ್ಮಾಣ ಮಾಡಿಕೊಡಬೇಕು. ವಿದ್ಯಾರ್ಥಿಗಳಿಗೆ ಕುಡಿಯಲು ಹಾಗೂ ದಿನನಿತ್ಯದ ಬಳಕೆಗೆ ಹೊಸ ಬೋರ್ವೆಲ್ ಕೊರೆಸಿ ನೀರಿನ ಸಂಪರ್ಕ ಕೊಡಿಸಬೇಕು. ಶಾಲೆಯಲ್ಲಿ ಹಮ್ಮಿಕೊಳ್ಳಲಾಗುವ ಸಭೆ ಸಮಾರಂಭಗಳನ್ನು ಮಾಡಲು ರಂಗಮಂದಿರ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡುವಂತೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಶಾಲೆಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಹನೂರು ಪಟ್ಟಣದಿಂದ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಶಾಲೆಗಳಿಗೆ ಬರುವ ಶಿಕ್ಷಕರುಗಳಿಗೆ ಕೆಎಸ್ಆರ್‌ಟಿಸಿ ಬಸ್ ಚಾಲಕರು ನಿಗದಿತ ಗ್ರಾಮಗಳಲ್ಲಿ ನಿಲುಗಡೆ ಮಾಡದೇ ಇರುವುದರಿಂದ ಶಿಕ್ಷಕರು ಪ್ರತಿನಿತ್ಯ ಪರಿತಪಿಸುತ್ತಿದ್ದಾರೆ. ಪ್ರತಿಯೊಬ್ಬರು ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದು ಆನಂತರ ಶಾಲೆಗೆ ತೆರಳುತ್ತಿದ್ದಾರೆ. ಇದರಿಂದ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ನಿಗದಿತ ಗ್ರಾಮಗಳಲ್ಲಿ ನಿಲುಗಡೆಗೆ ಅವಕಾಶ ಮಾಡಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಮಕ್ಕಳ ತರಗತಿ ಕೋಣೆಗಳಿಗೆ ತೆರಳಿದ ಜಿಲ್ಲಾಧಿಕಾರಿ ಶ್ರೀರೂಪ ಅವರು, ಭಾನುವಾರ ನಡೆದಂತಹ ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶ ಪರೀಕ್ಷೆ ಹೇಗೆ ಬರಿದಿದ್ದೀರಾ, ಜೊತೆಗೆ ಕೊಠಡಿಯಲ್ಲಿದ್ದ ಸೌರವ್ಯೂಹದಲ್ಲಿ ಇರುವಂತಹ ಗ್ರಹಗಳ ಬಗ್ಗೆ ಮಕ್ಕಳನ್ನು ಕೇಳುವ ಮೂಲಕ ಅವರಿಂದ ಉತ್ತರವನ್ನು ಪಡೆದುಕೊಂಡರು.
ನಂತರ ಮಾತನಾಡಿದ ಅವರು, ಸರ್ಕಾರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಲವು ವ್ಯವಸ್ಥೆಗಳನ್ನು ಮಾಡಿಕೊಟ್ಟಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಪ್ರತಿನಿತ್ಯ ಶಾಲೆಗೆ ತಪ್ಪದೆ ಆಗಮಿಸಿ ಗುಣಮಟ್ಟದ ಶಿಕ್ಷಣ ಪಡೆದುಕೊಂಡು ಉನ್ನತ ಸ್ಥಾನಕ್ಕೆ ಏರಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಸಲಹೆ ನೀಡಿದರು.
ನಂತರ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದ ನಂತರ ನೀವು ಏನು ಆಗಬೇಕು ಎಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿದಾಗ ವಿದ್ಯಾರ್ಥಿಗಳು ಶಿಕ್ಷಕರಾಗುತ್ತೇವೆ ಎಂದರು. ಇನ್ನು ಕೆಲವರು ಪೊಲೀಸ್ ಆಗಬೇಕು ಎಂದರು. ಈ ವೇಳೆ ಸಾಲೂರು ಬೃಹನ್ ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿ ಮಾತನಾಡಿ ನಮ್ಮ ಭಾಗದಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ಎಲ್ಲರೂ ಶಿಕ್ಷಕರಾಗಬೇಕು ಅಂದುಕೊಂಡಿದ್ದಾರೆ ಎಂದು ಹಾಸ್ಯ ಚಟಾಕಿ ಸಿಡಿಸಿದರು.
ಈ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು, ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಸೇರಿದಂತೆ ಇನ್ನಿತರರು ಹಾಜರಿದ್ದರು.




