ಚಾಮರಾಜನಗರ: ಇಂದು ಸಿಎಂ ಸಿದ್ದರಾಮಯ್ಯ ಅವರು ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿದ್ದು, ಸಂಜೆ ವೇಳೆಗೆ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರು, ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಸ್ಮಾರಕದ ಉದ್ಘಾಟನೆ ನೆರವೇರಿಸಲಿದ್ದಾರೆ.
ಆ ಬಳಿಕ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಪ್ರದೇಶದಲ್ಲಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಭರಚುಕ್ಕಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಲಾಗಿದೆ.
ಇನ್ನು ಈ ಬಾರಿ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ ತೊರೆಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ.
ಈ ಹಿನ್ನೆಲೆಯಲ್ಲಿ ಈ ಬಾರಿಯೂ ಜಲಪಾತೋತ್ಸವ ಆಯೋಜನೆ ಮಾಡಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅದ್ಧೂರಿ ಚಾಲನೆ ನೀಡಲಿದ್ದಾರೆ.
ಭರಚುಕ್ಕಿ ಜಲಪಾತೋತ್ಸವದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಕೆ.ವೆಂಕಟೇಶ್ ಸೇರಿದಂತೆ ಹಲವು ಶಾಸಕರು ಹಾಗೂ ಸಂಸದರು ಭಾಗಿಯಾಗಲಿದ್ದಾರೆ.
ಇನ್ನು ಭರಚುಕ್ಕಿ ಪ್ರದೇಶದಲ್ಲೂ ಅಂತಿಮ ಸಿದ್ಧತಾ ಕಾರ್ಯ ನಡೆದಿದ್ದು, ಸಂಜೆ ಕಾರ್ಯಕ್ರಮವಾದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇಂದಿನ ಕಾರ್ಯಕ್ರಮದಲ್ಲಿ ಹಲವು ಪ್ರವಾಸಿಗರು ಭರಚುಕ್ಕಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.





