ಮಹಾದೇಶ್ ಎಂ ಗೌಡ
ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಣನಕೆರೆ ಗ್ರಾಮದ ಬಳಿ ನಡೆದಿದೆ.
ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಮೇಗೌಡನ ಹಳ್ಳಿಯ ಶಿವಪ್ಪ ಬಿನ್ ರಾಜು, ಹಾಗೂ ಸತ್ತಿ ಬಿನ್ ಮಾದೇವ ಮೃತ ದುರ್ದೈವಿಗಳಾಗಿದ್ದಾರೆ.
ಘಟನೆ ವಿವರ: ಮಲೆ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕೋಣನಕೆರೆಯಿಂದ ಪೊನ್ನಾಚಿ ಗ್ರಾಮಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮುಗಿಲು ಮುಟ್ಟಿದ ಆಕ್ರಂದನ: ಇನ್ನು ಅವಿವಾಹಿತ ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮೃತರ ಸಂಬಂಧಿಕರು ರಸ್ತೆಯಲ್ಲಿಯೇ ರೋಧಿಸುತ್ತಿರುವುದನ್ನು ಕಂಡ ದಾರಿಹೋಕರು ಮರುಕ ವ್ಯಕ್ತಪಡಿಸಿದರು.
ಘಟನಾ ಸ್ಥಳಕ್ಕೆ ರಾಮಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




