ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಯ್ಯನಹಳ್ಳಿ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ವ್ಯವಸ್ಥೆ ಇಲ್ಲದ ಪರಿಣಾಮ ಗ್ರಾಮಸ್ಥರು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ. ಶೆಟ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭದ್ರಯ್ಯನಹಳ್ಳಿ ಗ್ರಾಮದಲ್ಲಿ ಸುಮಾರು ಒಂದುವರೆ ಸಾವಿರಕ್ಕೂ ಎಷ್ಟು ಕುಟುಂಬಸ್ಥರು ವಾಸವಿದ್ದಾರೆ. ಆದರೆ ಕಳೆದ ಒಂದು ತಿಂಗಳಿನಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಆಗದ ಪರಿಣಾಮ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.
ಕುಡಿಯುವ ನೀರು ಪೂರೈಕೆ ಮಾಡುವಂತೆ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಈ ನಿಟ್ಟಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನಾಕಾರರು ಮಾತನಾಡಿ ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಯ್ಯನಹಳ್ಳಿ ಗ್ರಾಮಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ ಗ್ರಾಮದಲ್ಲಿ ಸಿಸಿ ರಸ್ತೆ ಚರಂಡಿ ವಿದ್ಯುತ್ ಕುಡಿಯುವ ನೀರು ವ್ಯವಸ್ಥೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಕುಡಿಯುವ ನೀರು ಪೂರೈಕೆ ಮಾಡುವಂತೆ ಹಲವಾರು ಬಾರಿ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಕೊಳವೆಬಾವಿ ದುರಸ್ತಿ: ಭದ್ರಯನಹಳ್ಳಿ ಗ್ರಾಮದಲ್ಲಿ ಹಲವಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಇದುವರೆಗೂ ಕೊಳವೆಬಾವಿ ದುರಸ್ತಿಯಾಗಿದ್ದರು. ದುರಸ್ತಿ ಮಾಡಿರಲಿಲ್ಲ ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಅಧಿಕಾರಿಗಳಿಗೆ ಗ್ರಾಮಗಳ ಜನರ ಮೇಲೆ ಕಾಳಜಿ ಜವಾಬ್ದಾರಿ ಇದ್ದರೆ, ಕುಡಿಯುವ ನೀರು ಸಮಸ್ಯೆಯಾಗುತ್ತಿದ್ದಂತೆ ಪರಿಹಾರ ಕಂಡುಕೊಳ್ಳಬೇಕಿದ್ದು ಆದರೆ ಪ್ರತಿಭಟನೆ ನಡೆದ ನಂತರ ದುರಸ್ತಿ ಮಾಡುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಇಒ ಭೇಟಿ: ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಯ್ಯನ ಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಂಬಂಧ ಪ್ರತಿಭಟನೆ ಮಾಡುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಈ ಉಮೇಶ್ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದಲ್ಲದೆ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಹಿನ್ನೆಲೆ ಆ ಗ್ರಾಮಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ತಾಲೂಕು ವ್ಯಾಪ್ತಿಯ ನಾಲ್ಕು ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು ಈಗಾಗಲೇ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮಕೈಗೊಳ್ಳಲು ಸಭೆ ನಡೆಸಿ ಸೂಚನೆ ನೀಡಿದ್ದೇನೆ. ಭದ್ರಯ್ಯನಹಳ್ಳಿ ಗ್ರಾಮದಲ್ಲಿಯೂ ಮೋಟಾರ್ ದುರಸ್ತಿ ಮಾಡಲು ಎರಡು ದಿನಗಳ ಹಿಂದೆ ತಿಳಿಸಲಾಗಿತ್ತು. ಆದರೆ ದುರಸ್ತಿ ವಾಹನ ಬಾರದೆ ಇರುವುದರಿಂದ ಸಮಸ್ಯೆಯಾಗಿತ್ತು. ಶನಿವಾರವೇ ದುರಸ್ತಿವಾಹನ ಬಂದಿದ್ದು ಮೋಟಾರ್ ದುರಸ್ತಿ ಪಡಿಸಿದ ನಂತರ ಗ್ರಾಮಸ್ಥರಿಗೆ ನೀರು ಪೂರೈಕೆ ಮಾಡಲಾಗುವುದು ಎಂದು ಇಒ ಉಮೇಶ್ ತಿಳಿಸಿದ್ದಾರೆ.