ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ.
ಗ್ರಾಮದ ಕನಕರಾಜು ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಮುಸುಕಿನ ಜೋಳದ ಫಸಲನ್ನು ತಿಂದು ನಾಶಮಾಡಿವೆ. ಇದಲ್ಲದೇ ಜಮೀನಿನಲ್ಲಿದ್ದ ಕೃಷಿ ಪರಿಕರಗಳನ್ನು ತುಳಿದು ನಾಶಪಡಿಸಿರುವುದರಿಂದ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಬೆಳೆ ನಾಶದಿಂದ ತೀವ್ರ ಸಂಕಷ್ಟದಲ್ಲಿರುವ ರೈತ ಕನಕರಾಜುಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದರ ಜೊತೆಗೆ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇವುಗಳನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಮುಂದಾದರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಆನೆಗಳು ನಾಡಿನತ್ತ ಬರದ ಹಾಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





