Mysore
26
broken clouds

Social Media

ಬುಧವಾರ, 06 ಮೇ 2026
Light
Dark

ಮಹದೇಶ್ವರ ಬೆಟ್ಟದಲ್ಲಿ ಶೀಘ್ರದಲ್ಲಿ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ: ಸಚಿವ ಕೆ ವೆಂಕಟೇಶ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಅತಿ ಶೀಘ್ರದಲ್ಲಿ ಮುಖ್ಯಮಂತ್ರಿಗಳನ್ನು ಕರೆತಂದು ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರಾಧಿಕಾರದ ಉಪಾಧ್ಯಕ್ಷ ಕೆ ವೆಂಕಟೇಶ್ ತಿಳಿಸಿದರು.

ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತಿರುಪತಿ ಮಾದರಿಯಲ್ಲಿ ಕ್ಯೂಲೈನ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಕ್ತಾಯದ ಹಂತಕ್ಕೆ ಬಂದಿದೆ. ಇನ್ನೂ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಇದರಿಂದ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಕ್ಯೂ ಲೈನ್ ನಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರು, ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಿರುವುದರಿಂದ 90 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ದಾಸೋಹ ಭವನ ನಿರ್ಮಾಣ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದ್ದು, ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿಸಲಾಗುವುದು ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯ ವಸ್ತುಗಳನ್ನು ಯಾವ ರೀತಿ ಮರುಬಳಕೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಖಾಸಗಿ ಏಜೆನ್ಸಿ ಮುಖಾಂತರ ಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಸಮಗ್ರ ಯೋಜನೆ ರೂಪಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಕಳೆದ ವರ್ಷ ಸಚಿವ ಸಂಪುಟ ಸಭೆ ನಡೆದ ಸಂದರ್ಭದಲ್ಲಿ ವಜ್ರಮಲೆ ವಸತಿಗೃಹವನ್ನು ಉದ್ಘಾಟನೆ ಮಾಡಲಾಗಿತ್ತು. ಇದೀಗ ಪೀಠೋಪಕರಣಗಳನ್ನು ಅಳವಡಿಸುತ್ತಿದ್ದು ಮುಂದಿನ ದಿನಗಳಲ್ಲಿ ಭಕ್ತಾದಿಗಳಿಗೆ ವಾಸ್ತವ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಒಟ್ಟಾರೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಒಂದು ವೇಳೆ ಕಳಪೆ ಕಾಮಗಾರಿ ಕಂಡು ಬಂದರೆ ಅಂತಹ ಗುತ್ತಿಗೆದಾರರ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದರು.

ಒಳ ಚರಂಡಿಯ ನೀರು ಅಂತರಗಂಗೆ ಸೇರಿ ಭಕ್ತಾದಿಗಳಿಗೆ ತೊಂದರೆಯಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಮಾತನಾಡಿ, ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಕಲ್ಯಾಣಿ ನಿರ್ಮಾಣ ಮಾಡಿ ಪೈಪ್ ಗಳ ಮೂಲಕ ಶುದ್ಧ ನೀರು ಬಿಡಲಾಗುತ್ತಿದೆ. ಆದರೂ ಕೆಲವು ಭಕ್ತಾದಿಗಳು ಅಂತರಗಂಗೆಯಲ್ಲಿ ಸಂಪ್ರದಾಯದಂತೆ ಸ್ನಾನ ಮಾಡುತ್ತಿದ್ದಾರೆ. ಈಗಾಗಲೇ ಮೈ ಕ್ಯಾಪ್ಸ್ ಸಂಸ್ಥೆಯವರು ಸಿಎಸ್ಆರ್ ಅನುದಾನದಲ್ಲಿ ಎರಡು ಕೋಟಿ ಅನುದಾನ ನೀಡುತ್ತಿದ್ದಾರೆ. ಈ ಅನುದಾನ ಸದ್ಬಳಕೆ ಮಾಡಿಕೊಂಡು ಅಂತರಗಂಗೆಯನ್ನು ಪುನಶ್ಚೇತನಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯವಾಗಿ ಘೋಷಣೆಯಾಗಿದ್ದರೂ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುತ್ತಿಲ್ಲ ಎಂಬುದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಮಲೆ ಮಾದೇಶ್ವರ ಬೆಟ್ಟಕ್ಕೆ ರಾಜ್ಯ ಸೇರಿದಂತೆ ನೆರೆ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಈಗಾಗಲೇ ಪ್ರಾಧಿಕಾರದ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಹಂತ ಹಂತವಾಗಿ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧ ವಿಧಿಸಲಾಗುವುದು ಎಂದರು.

ಶಿವರಾತ್ರಿ ಜಾತ್ರಾ ಮಹೋತ್ಸವ ಮುಗಿದರೂ ಅರಣ್ಯ ಪ್ರದೇಶದ ಇಕ್ಕಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಮಾಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕಾರ್ಯದರ್ಶಿ ರಘು ಅವರು, ತಾಳು ಬೆಟ್ಟದಿಂದ ಮಲೆ ಮಾದೇಶ್ವರ ಬೆಟ್ಟದವರೆಗೆ ಈಗಾಗಲೇ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛತೆ ಮಾಡಲಾಗಿದೆ. ತಾಳು ಬೆಟ್ಟದಿಂದ ಕೌದಳ್ಳಿಯವರೆಗೂ ಪ್ಲಾಸ್ಟಿಕ್ ಸಂಗ್ರಹಣೆಯನ್ನು ಪ್ರಾಧಿಕಾರದ ವತಿಯಿಂದಲೇ ಸಂಗ್ರಹಣೆ ಮಾಡಲಾಗುವುದು ಎಂದು ತಿಳಿಸಿದರು.

ಕ್ಯೂ ಲೈನ್‌ನಲ್ಲಿ ಅಗತ್ಯ ಸೌಲಭ್ಯ: ಭಕ್ತಾದಿಗಳು ದೇವರ ದರ್ಶನ ಪಡೆಯಲು ಪ್ರಸ್ತುತ ನಿರ್ಮಾಣವಾಗುತ್ತಿರುವ ಸರತಿ ಸಾಲಿನ ಸಂಕೀರ್ಣದಿಂದ ದೇಗುಲದ ಆಲಂಬಾಡಿ ದ್ವಾರದವರೆಗೆ ಆರು ಮೀಟರ್ ಸುರಂಗ ಮಾರ್ಗ ಹಾಗೂ ಮೆಟ್ಟಿಲುಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ಈ ಮಾರ್ಗದಲ್ಲಿ ಗಣಕಿ ಕೃತ ಎಲ್‌ಇಡಿ ಪರದೆಯ ಮೇಲೆ ಉಪಯುಕ್ತ ಮಾಹಿತಿ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ. ನೆಲ ಮಹಡಿ ಹಾಗೂ ಮೊದಲ ಅಂತಸ್ತಿನಲ್ಲಿ ಒಂದು ಬ್ಲಾಕ್ ನಲ್ಲಿ 500 ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು ಎಂಟು ಬ್ಲಾಕ್ ನಿರ್ಮಾಣ ಮಾಡಲಾಗುತ್ತಿದೆ. ಪ್ರತಿ ಬ್ಲಾಕ್‌ನಲ್ಲಿಯೂ ಮಹಿಳೆಯರು ಪುರುಷರು, ಅಂಗವಿಕಲರಿಗೆ ಪ್ರತ್ಯೇಕ ಶೌಚಗೃಹ, ಶುದ್ಧ ಕುಡಿಯುವ ನೀರು, ಫ್ಯಾನ್ ಒದಗಿಸುವ ಉದ್ದೇಶವನ್ನು ಹೊಂದಲಾಗಿದೆ. ಹಾಗಾಗಿ ಈ ಯೋಜನೆ ಪೂರ್ಣಗೊಂಡರೆ ಶ್ರೀ ಕ್ಷೇತ್ರಕ್ಕೆ ಬರುವಂತಹ ಭಕ್ತಾದಿಗಳು ಯಾವುದೇ ತೊಂದರೆ ಇಲ್ಲದೆ ದೇವರ ದರ್ಶನ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿದು ಬಂದಿದೆ.

ಕಾಮಗಾರಿ ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಶ್ರೀರೂಪಾ, ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು , ಉಪ ಕಾರ್ಯದರ್ಶಿ ಚಂದ್ರಶೇಖರ್, ಎಇಇ ಚಿನ್ನಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:
error: Content is protected !!