ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಡಿ.12ರಂದು ವಿವಿಧ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲೋಕಾರ್ಪಣೆಗೊಳಸಿಲಿದ್ದು ಈ ಸಂಬಂಧ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಪರಿಶೀಲಿಸಿದರು.
ತಾಲ್ಲೂಕಿನ ಬಹುನಿರೀಕ್ಷಿತ 198 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 98 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಿದ್ದಾರೆ. ಹನೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಬಾಲಕಿಯರ ವಸತಿ ನಿಲಯ, ಇಂದಿರಾ ಗಾಂಧಿ ವಸತಿ ಶಾಲೆ ಹಾಗೂ ಗುಂಪು ಮನೆ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಹಕ್ಕುಪತ್ರ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಶನಿವಾರ ಸಂಜೆ ಅಧಿಕಾರಿಗಳೊಂದಿಗೆ ಮಹದೇಶ್ವರ ಕ್ರೀಡಾಂಗಣಕ್ಕೆ ಬೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ರಾಜ್ಯದ ಮುಖ್ಯಮಂತ್ರಿಗಳು ತಾಲ್ಲೂಕು ಕೇಂದ್ರಕ್ಕೆ ಆಗಮಿಸುವುದರಿಂದ ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಕೆಶಿಫ್ ಯೋಜನೆಯಡಿ ನಿರ್ಮಾಣವಾಗುತ್ತಿರುವ ರಸ್ತೆ ಹೊರತುಪಡಿಸಿ ಉಳಿದ ಕಡೆ ರಸ್ತೆಗಳಲ್ಲಿ ಉಂಟಾಗಿರುವಗುಂಡಿಗಳನ್ನು ಮುಚ್ಚಿಸಿಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಚಿವರ ಗಮನಸೆಳೆದ ಕ್ರೀಡಾಪಟುಗಳು : ಸುಸಜ್ಜಿತ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕು, ವಾಯು ವಿಹಾರಿಗಳಿಗೆ ವಿದ್ಯುತ್ ಸೌಲಭ್ಯ ಇಲ್ಲದೆ ಇರುವುದರಿಂದ ತೀವ್ರ ತೊಂದರೆಯಾಗುತ್ತಿದೆ, ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರೀಡಾ ಸಾಮಗ್ರಿಗಳನ್ನು ನೀಡುವಂತೆ ಸಚಿವರಿಗೆ ಮನವಿ ಮಾಡಿದರು. ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿ ಇ ಇ ವಿನಯ್ ಕುಮಾರ್ ಅವರಿಗೆ ನಾಳೆಯೇ ಐದು ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಸೂಚನೆ ನೀಡಿ, ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ ಗಾಯತ್ರಿ,ಇ ಇ ವಿನಯ್ ಕುಮಾರ್,ಉಪ ವಿಭಾಗಾಧಿಕಾರಿ ಗೀತಾ ಹುಡೇದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಸುಂದರ್ ರಾಜ್ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ದತ್ತೇಶ್ ಕುಮಾರ್, ಬಿಜೆಪಿ ಮುಖಂಡ ನಿಶಾಂತ್,ತಹಸಿಲ್ದಾರ್ ಆನಂದಯ್ಯ ಇ ಒ ಶ್ರೀನಿವಾಸ್ ಸಿ ಒ ಮೂರ್ತಿ ಇದ್ದರು.




